ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ: ತಾಲೂಕಿನ ಸಮೀಪದ ಮಳಲಗಾಂವ ಕ್ರಾಸ್ ಬಳಿ ಗುರುವಾರ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಾರಣಾಂತಿಕವಾಗಿ ಗಾಯಗೊಂಡಿದ್ದ ಕಾರು ಚಾಲಕನನ್ನು ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಮೃತ ಪಟ್ಟಿದ್ದಾನೆ.
ಸಿದ್ದಾಪುರದಿಂದ ಬೆಳಗಾವಿಗೆ ಮದುವೆ ಸಮಾರಂಭ ಕ್ಕೆ ಒಪ್ಪಂದದ ಮೇರೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಕಾರಿನ ನಡುವೆ ಮಳಲಗಾಂವ ಬಳಿ ಮುಖಾಮುಖಿ ಡಿಕ್ಕಿಯಾದ
ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಸಿಲುಕಿಕೊಂಡು ತೀವ್ರ ಗಾಯಗೊಂಡಿದ್ದ. ಮಂಗಳೂರಿನಲ್ಲಿ ನೆಲೆಸಿದ್ದ ಕುಂದಾಪುರ ನಿವಾಸಿ ಮುಕೇಶ್ ಶೆಟ್ಟಿ ಸಾವನಪ್ಪಿದ ದುರ್ದೈವಿಯಾಗಿದ್ದಾರೆ.
ಮಂಗಳೂರಿನಲ್ಲಿ ಮ್ಯಾಕ್ಸ್ ಇನ್ಫೋಟೆಸ್ ಹಾಗೂ ಇನ್ನಿತರ ಸಂಸ್ಥೆಯನ್ನು ನಡೆಸುತ್ತಿದ್ದ ಮುಕೇಶ್ ಶೆಟ್ಟಿ ಶಿರಸಿ ಕಡೆಗೆ ಕೆಲಸದ ನಿಮಿತ್ತ ಪ್ರಯಾಣಿಸುತ್ತಿದ್ದರು. ಬಸ್ಸಿನಲ್ಲಿದ್ದ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಶಿರಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಮದುವೆಗೆ ಹೊರಟಿದ್ದ ಪ್ರಯಾಣಿಕರಿಗೆ ತೊಂದರೆಯಾಗದಂತೆ ತಕ್ಷಣವೇ ಬದಲಿ ಬಸ್ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ಅಪಘಾತ ನಡೆದ ಸ್ಥಳದಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಮದುವೆ ಸಂಭ್ರಮದಲ್ಲಿದ್ದ ಪ್ರಯಾಣಿಕರು ಈ ಹಠಾತ್ ಘಟನೆಯಿಂದ ಆತಂಕಗೊಂಡಿದ್ದರು. ಅದೃಷ್ಟವಶಾತ್ ಬಸ್ಸಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳನ್ನು ರಕ್ಷಿಸುವಲ್ಲಿ ನೆರವಾಗಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
