ಸುದ್ದಿ ಕನ್ನಡ ವಾರ್ತೆ
ಬೆಂಗಳೂರು:ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿದ್ದು, ಕರ್ನಾಟಕದ 6 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾನುವಾರ ಮುಂಜಾನೆ, ಕೇರಳದ ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಮಳೆಯಾಗಿದೆ. ಸಂಜೆಯ ವೇಳೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ,ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ಭಾಗದಲ್ಲಿ,ಇನ್ನಿತರ ಕಡೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗಿದೆ ಎಂದು ಇಲಾಖೆ ಹೇಳಿದೆ.
ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.ಗಾಳಿಯ ಒತ್ತಡ ಅಥವಾ ಪ್ರಭಾವ ಹೆಚ್ಚಿದ್ದರೆ ಉಳಿದ ಭಾಗಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಜೊತೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು, ಅಧಿಕ ತಾಪಮಾನವಿದೆ. ಆದಾಗ್ಯೂ, ಈ ಭಾಗಗಳಲ್ಲಿಯೂ ಅಲ್ಲಲ್ಲಿ ಮೋಡದ ವಾತಾವರಣವೂ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಮುಂದಿನ ವಾರವೂ ಹೆಚ್ಚು ಮಳೆಯಾಗಲಿದ್ದು, ಮಾರ್ಚ್ 17ರಿಂದ 19ರವರೆಗೆ ಮಳೆಯಾಗಲಿದೆ ಎಂದು ಇಲಾಖೆ ವಿವರಿಸಿದೆ.
