ಸುದ್ದಿ ಕನ್ನಡ ವಾರ್ತೆ
ಸಾಗರಮಾಲಾ ಯೋಜನೆಯಡಿ ಮಂಜೂರಾಗಿ ಸದ್ಯ ಪ್ರಗತಿಯಲ್ಲಿರುವ 766 E ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ, ಮಾನ್ಯ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರ ಗಮನಕ್ಕೆ ಈ ರಸ್ತೆಯ ಗಂಭೀರತೆಯನ್ನು ತಂದಿದ್ದರು.
ಈ ಹಿನ್ನೆಲೆಯಲ್ಲಿ ದೆಹಲಿ ಮಟ್ಟದ ಉನ್ನತ ಅಧಿಕಾರಿಗಳು ಹಾಗೂ ಸಂಸದರ ನಡುವೆ ನಡೆದ ಸಭೆಯ ಫಲವಾಗಿ, ಇಂದು ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಹಾಗೂ ಗುತ್ತಿಗೆದಾರರ ತಂಡ ಜಂಟಿ ಸಮೀಕ್ಷೆ ಮತ್ತು ಸ್ಥಳ ಪರಿಶೀಲನೆ ನಡೆಸಿತು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಬೆಂಗಳೂರು ಪ್ರಾದೇಶಿಕ ಅಧಿಕಾರಿ ಬ್ರಹ್ಮಾಕರ್ ಹಾಗೂ ಯೋಜನಾಧಿಕಾರಿ ಶಿವಕುಮಾರ್ ಅವರು, ಯೋಜನೆಯ ಗುತ್ತಿಗೆ ವಹಿಸಿಕೊಂಡಿರುವ ಅಮ್ಮಾಪುರ್ ಕನ್ಸ್ಟ್ರಕ್ಷನ್ ಕಂಪನಿ ಹಾಗೂ ಆರ್.ಎನ್.ಎಸ್ (RNS) ಕಂಪನಿಯ ಪ್ರತಿನಿಧಿಗಳೊಂದಿಗೆ ಜಂಟಿಯಾಗಿ ಶಿರಸಿ-ಹಾವೇರಿ ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು.
ಬರುವ ಮಳೆಗಾಲದಲ್ಲಿ ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆಯಾಗದಂತೆ ಸಕಾಲದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಕಾಮಗಾರಿಯ ವೇಗವನ್ನು ಹೆಚ್ಚಿಸಬೇಕು ಎಂದು ಸ್ಥಳದಲ್ಲಿದ್ದ ಉಭಯ ಗುತ್ತಿಗೆದಾರ ಕಂಪನಿಗಳಿಗೆ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮಳೆಗಾಲ ಆರಂಭವಾಗುವ ಮುನ್ನವೇ ರಸ್ತೆಯು ಸುಗಮ ಸಂಚಾರಕ್ಕೆ ಯೋಗ್ಯವಾಗುವಂತೆ ಕೆಲಸ ನಿರ್ವಹಿಸಿ, ಕಾಮಗಾರಿಯಲ್ಲಿ ತ್ವರಿತ ಪ್ರಗತಿ ಸಾಧಿಸಬೇಕೆಂದು ಗುತ್ತಿಗೆದಾರರಿಗೆ ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ.ಎಂದು ಸಂಸದರ ಕಾರ್ಯಾಲಯ ದ ಮಾಹಿತಿ ಯಲ್ಲಿ ತಿಳಿಸಿದೆ.
