ಸುದ್ದಿ ಕನ್ನಡ ವಾರ್ತೆ
ಅಂಕೋಲಾ:ತಾಲೂಕಿನ ಕಂಚನಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಬಳ್ಳಾರಿಯಿಂದ ಗೋವಾಕ್ಕೆ ತೆರಳುತ್ತಿದ್ದ ಸೀಬರ್ಡ ಸಂಸ್ಥೆಯ ಖಾಸಗಿ ಸ್ವೀಪರ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಓರ್ವ ಪ್ರಯಾಣಿಕ ಮೃತಪಟ್ಟು 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ಸಂಭವಿಸಿದೆ ಎಂದು ವರದಿಯಾಗಿದೆ.
ಅಪಘಾತದ ವೇಳೆ ಬಸ್‌ನಲ್ಲಿ ಒಟ್ಟು 36 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.ತೀವ್ರವಾಗಿ ಗಾಯಗೊಂಡಿದ್ದ ಪ್ರಯಾಣಿಕರೊಬ್ಬರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.ಗಾಯಗೊಂಡ 21ಜನರನ್ನು ತಕ್ಷಣವೇ ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಆರು ಜನರನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಉಳಿದ 15 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಂಕೋಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತದ ರಭಸಕ್ಕೆ ಬಸ್ ಹೆದ್ದಾರಿಗೆ ಅಡ್ಡಲಾಗಿ ಉರುಳಿ ಬಿದ್ದಿದ್ದರಿಂದ ಯಲ್ಲಾಪುರ-ಅಂಕೋಲಾ ಮಾರ್ಗದಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಘಟನಾ ಸ್ಥಳಕ್ಕೆ ಅಂಕೋಲಾ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಧಾವಿಸಿದ್ದು, ಕ್ರೇನ್ ಸಹಾಯದಿಂದ ಬಸ್ ಅನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಲು ಹರಸಾಹಸ ನಡೆಸಿದರು. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
