ಸುದ್ದಿ ಕನ್ನಡ ವಾರ್ತೆ
​ಶಿರಸಿ: ತಾಲೂಕಿನ ಸೋಂದಾ ಗ್ರಾಪಂ ವ್ಯಾಪ್ತಿಯ ಸ್ವರ್ಣವಲ್ಲಿ ಮಹಾಸಂಸ್ಥಾನದ ಸಮೀಪದಲ್ಲಿರುವ ಶಾಲ್ಮಲಾ ನದಿ ತೀರದ ಸ್ನಾನಘಟ್ಟಕ್ಕೆ ಸಂಪರ್ಕ ಕಲ್ಪಿಸುವ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಲಾಯಿತು.

​ಸ್ವರ್ಣವಲ್ಲಿಯ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಸಾನ್ನಿಧ್ಯದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
​ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ 2025-26ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಸೋಂದಾ ಗ್ರಾಪಂ ವ್ಯಾಪ್ತಿಯ ಶಾಲ್ಮಲಾ ನದಿ ತೀರದ ಸ್ನಾನಘಟ್ಟಕ್ಕೆ ಸಂಪರ್ಕ ರಸ್ತೆ ನಿರ್ಮಾಣಕ್ಕಾಗಿ 5 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಜಿಲ್ಲಾ ನಿರ್ಮಿತಿ ಕೇಂದ್ರದ ಮೂಲಕ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ವಿಧಿವಿಧಾನಗಳೊಂದಿಗೆ ಕಾಮಗಾರಿಗೆ ಚಾಲನೆ ನೀಡಲಾಯಿತು.

​ಸ್ವರ್ಣವಲ್ಲಿ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್. ಹೆಗಡೆ ಬೊಮ್ಮಳ್ಳಿ, ತಾಪಂ ಮಾಜಿ ಸದಸ್ಯ ನಾಗರಾಜ ಶೆಟ್ಟಿ, ಆರ್. ಎಸ್. ಹೆಗಡೆ ಉಳ್ಳಿಕೊಪ್ಪ, ಸ್ಥಳೀಯ ಜಾಗೃತ ವೇದಿಕೆಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.