ಸುದ್ದಿ ಕನ್ನಡ ವಾರ್ತೆ
​ಜೋಯಿಡಾ: ತಾಲೂಕಿನ ರಾಮನಗರ ಬಸ್ ನಿಲ್ದಾಣದಲ್ಲಿ ಇಂದು ಶುಕ್ರವಾರ ಬೆಳಿಗ್ಗೆ ರಾಮನಗರ-ತಿನ್ನೈಘಾಟ್ ಮಾರ್ಗದಲ್ಲಿ ಸಂಚರಿಸುವ ಸರ್ಕಾರಿ ಬಸ್‌ನಲ್ಲಿ ಶಾಲಾ ವಿದ್ಯಾರ್ಥಿಗಳು ನಿಗದಿತ ಆಸನದ ಸಂಖ್ಯೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಿರುವ ದೃಶ್ಯ ಕಂಡುಬಂದಿದೆ.
​ಪ್ರತಿದಿನ ಶಾಲೆಗೆ ತೆರಳುವ ವಿದ್ಯಾರ್ಥಿಗಳು ದಟ್ಟನೆಯಲ್ಲಿ ಬಸ್‌ನಲ್ಲಿ ಪ್ರಯಾಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಪೋಷಕರು ಹಾಗೂ ಜಾಗೃತ ನಾಗರಿಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

​ವಿದ್ಯಾರ್ಥಿಗಳ ಜೀವ ಹಾಗೂ ಭದ್ರತೆಯೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು ಎಂದು ಒತ್ತಾಯಿಸಿರುವ ಸಾರ್ವಜನಿಕರು, ಈ ಮಾರ್ಗದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆ ಬಸ್‌ಗಳನ್ನು ತಕ್ಷಣವೇ ವ್ಯವಸ್ಥೆ ಮಾಡಬೇಕೆಂದು ಸಂಬಂಧಿತ ಸಾರಿಗೆ ಇಲಾಖೆ ಹಾಗೂ ಆಡಳಿತಕ್ಕೆ ಮಾಧ್ಯಮದ ಮೂಲಕ ಆಗ್ರಹಿಸಿದ್ದಾರೆ.

​ಶಾಲಾ ವೇಳೆಯಲ್ಲಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಿದರೆ ವಿದ್ಯಾರ್ಥಿಗಳು ಸುರಕ್ಷಿತವಾಗಿ ಹಾಗೂ ಸುಗಮವಾಗಿ ಶಾಲೆಗೆ ತೆರಳಲು ಅನುಕೂಲವಾಗಲಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.