ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ಕರಂಜೋಯಿಡಾ-ವಾಗೇಲಿ ಮಾರ್ಗದ ಕಸಂಬಾ ಘಾಟಿಯಲ್ಲಿ ಮಳೆ ಹಾಗೂ ಬಿರುಗಾಳಿಯ ಪರಿಣಾಮ ರಸ್ತೆಗೆ ಬೃಹತ್ ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಈ ವೇಳೆ ಜೋಯಿಡಾಕ್ಕೆ ಬರುತ್ತಿದ್ದ ಬಸ್ಸಿನಲ್ಲಿದ್ದ ಪ್ರಯಾಣಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ರಸ್ತೆಗೆ ಅಡ್ಡವಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿದರು. ಅವರ ಸಮಯೋಚಿತ ಕಾರ್ಯದಿಂದ ಕೆಲಕಾಲ ಸ್ಥಗಿತಗೊಂಡಿದ್ದ ವಾಹನ ಸಂಚಾರ ಪುನಃ ಆರಂಭಗೊಂಡು ಪ್ರಯಾಣಿಕರು ಸುರಕ್ಷಿತವಾಗಿ ತಮ್ಮ ಪ್ರಯಾಣವನ್ನು ಮುಂದುವರಿಸಿದರು.
ಮಳೆಗಾಲದಲ್ಲಿ ಕಸಂಬಾ ಘಾಟಿ ಸೇರಿದಂತೆ ಈ ಮಾರ್ಗದಲ್ಲಿ ಮರಗಳು ಮತ್ತು ದೊಡ್ಡ ಕೊಂಬೆಗಳು ರಸ್ತೆಗೆ ಬೀಳುವ ಘಟನೆಗಳು ಮರುಕಳಿಸುತ್ತಿರುವುದರಿಂದ, ಸಂಬಂಧಿಸಿದ ಇಲಾಖೆಗಳು ಮುನ್ನೆಚ್ಚರಿಕಾ ಕ್ರಮವಾಗಿ ಅಪಾಯಕಾರಿಯಾಗಿ ವಾಲಿರುವ ಮರಗಳನ್ನು ತೆರವುಗೊಳಿಸಿ ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
