ಸುದ್ದಿ ಕನ್ನಡ ವಾರ್ತೆ
ಶಿರಸಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಯಾವುದೇ ಸಚಿವ ಸ್ಥಾನ ನೀಡದಿರುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲೆಯ ಜನರಿಗೆ ಅವಮಾನ ಮಾಡಿದ್ದು ಜನತೆಯ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ, ಇದನ್ನು ಜಿಲ್ಲೆಯ ಜನರು ಯಾವತ್ತೂ ಕ್ಷಮಿಸಿಸುವುದಿಲ್ಲ, ನೂತನ ಸಚಿವ ಸಂಪುಟದ ಮೊದಲ ಪಟ್ಟಿಯಲ್ಲಿ ಮಂಕಾಳು ವೈದ್ಯರಿಗೆ ಸಚಿವ ಸ್ಥಾನ ಎಂದು ಅಧಿಕೃತವಾಗಿ ಪ್ರಕಟಿಸಿ, ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನದಿಂದ ವಂಚಿಸುವುದರ ಮೂಲಕ ಅವಮಾನ ಮಾಡಿದೆ.
ಆದರೆ ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಕೈಬಿಟ್ಟು ಬೇರೆಯವರಿಗೆ ಅವಕಾಶ ನೀಡಿದೆ. ಈ ಮೂಲಕ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಹಿಂದುಳಿದ ವರ್ಗದ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಆರೋಪಿಸಿದರು.
ಮೊದಲ ಪಟ್ಟಿಯಲ್ಲಿ ಸಚಿವ ಸ್ಥಾನಕ್ಕೆ ಮಂಕಾಳು ವೈದ್ಯರ ಹೆಸರನ್ನು ಅಧಿಕೃತವಾಗಿ ಪ್ರಕಟಿಸಲಾಗಿತ್ತು. ಬಳಿಕ “ಎಸ್.ಎಸ್. ಮಲ್ಲಿಕಾರ್ಜುನ್ ಎಂದು ಬರೆಯುವ ಬದಲು ಪ್ರಿಂಟಿಂಗ್ ದೋಷದಿಂದ ಮಂಕಾಳು ವೈದ್ಯರ ಹೆಸರು ಪ್ರಕಟವಾಗಿದೆ” ಎಂದು ಕಾಂಗ್ರೆಸ್ ಹೈಕಮಾಂಡ್ ಬಾಲಿಶ ಸಮಜಾಯಿಷಿ ನೀಡಿರುವುದು ಹಾಸ್ಯಾಸ್ಪದವಾಗಿದೆ ಎಂದು ಅವರು ಟೀಕಿಸಿದರು.ಕಲಬುರಗಿ ಜಿಲ್ಲೆಗೆ ಮೂರು ಸಚಿವ ಸ್ಥಾನಗಳನ್ನು ನೀಡಿರುವ ಕಾಂಗ್ರೆಸ್ ಸರ್ಕಾರ, ಭೌಗೋಳಿಕವಾಗಿ ಗೋವಾ ರಾಜ್ಯಕ್ಕಿಂತ ಸುಮಾರು ಮೂರು ಪಟ್ಟು ದೊಡ್ಡದಾಗಿರುವ ಉತ್ತರ ಕನ್ನಡ ಜಿಲ್ಲೆಗೆ ಒಂದೇ ಒಂದು ಸಚಿವ ಸ್ಥಾನವನ್ನೂ ನೀಡಿಲ್ಲ. ಇದರ ಮೂಲಕ ಜಿಲ್ಲೆಗೆ ಹಾಗೂ ಹಿಂದುಳಿದ ವರ್ಗದವರಿಗೆ ತೀವ್ರ ಅನ್ಯಾಯ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಜನರು ಇದಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ.
ಈಗ ಮಳೆಗಾಲ ಆರಂಭವಾಗಿದ್ದು, ಕರಾವಳಿ ಹಾಗೂ ಗುಡ್ಡಗಾಡು ಪ್ರದೇಶಗಳನ್ನು ಹೊಂದಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಂತಹ ಸಮಸ್ಯೆಗಳು ಎದುರಾದಾಗ ಸಂತ್ರಸ್ತರಿಗೆ ತ್ವರಿತ ಪರಿಹಾರ ಒದಗಿಸಲು ಸಚಿವರೇ ಇಲ್ಲದಿರುವುದು ದೊಡ್ಡ ಸಮಸ್ಯೆಯಾಗಲಿದೆ. ಕೈಗಾ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ, ಬೇಡ್ತಿ–ಅಘನಾಶಿನಿ ನದಿ ಜೋಡಣೆ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳು ಜಿಲ್ಲೆಯ ಮುಂದಿವೆ. ಇಂತಹ ಭೌಗೋಳಿಕವಾಗಿ ವಿಸ್ತಾರವಾದ ಜಿಲ್ಲೆಗೆ ಉಸ್ತುವಾರಿ ಸಚಿವರನ್ನೂ ನೇಮಿಸದೇ ಸರ್ಕಾರ ಅನ್ಯಾಯ ಮಾಡಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ ಗ್ಯಾರಂಟಿಗಳ ಆಮಿಷದಿಂದ ಜಿಲ್ಲೆಯ ನಾಲ್ವರು ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ. ಆದರೂ ಜಿಲ್ಲೆಗೆ ಸಚಿವ ಸ್ಥಾನ ನೀಡದೆ, ಸಣ್ಣ ಸಮುದಾಯ ಹಾಗೂ ಹಿಂದುಳಿದ ವರ್ಗಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಆಕ್ಷೇಪಿಸಿದ್ದಾರೆ.
