ಸುದ್ದಿ ಕನ್ನಡ ವಾರ್ತೆ
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಬಿಎಸ್ಎನ್ಎಲ್ ಸೇವೆಯಲ್ಲಿನ ತಾಂತ್ರಿಕ ಸಮಸ್ಯೆಗಳು, ನೆಟ್ವರ್ಕ್ ವ್ಯತ್ಯಯ ಹಾಗೂ ಅಂಚೆ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಕುರಿತು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ದೆಹಲಿಯಲ್ಲಿ ಕೇಂದ್ರ ದೂರಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೂರಸಂಪರ್ಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯ ದೂರಸಂಪರ್ಕ ವ್ಯವಸ್ಥೆಯಲ್ಲಿರುವ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆ ನಡೆಸಿದರು. ವಿಶೇಷವಾಗಿ, ಬಿಎಸ್ಎನ್ಎಲ್ ಗ್ರಾಹಕರು ಎದುರಿಸುತ್ತಿರುವ ತಾಂತ್ರಿಕ ತೊಂದರೆಗಳು, ವಿದ್ಯುತ್ ವ್ಯತ್ಯಯದ ಸಂದರ್ಭದಲ್ಲಿ ಸಮರ್ಪಕ ಬ್ಯಾಟರಿ ಬ್ಯಾಕಪ್ ಇಲ್ಲದ ಕಾರಣ ನೆಟ್ವರ್ಕ್ ಸ್ಥಗಿತಗೊಳ್ಳುತ್ತಿರುವ ಸಮಸ್ಯೆ ಹಾಗೂ ಇದರಿಂದ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು.
ಜಿಲ್ಲೆಯ ಗ್ರಾಮೀಣ ಹಾಗೂ ದುರ್ಗಮ ಪ್ರದೇಶಗಳಲ್ಲಿ ದೂರಸಂಪರ್ಕ ಸೇವೆಯನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದ್ದು, ಅಗತ್ಯ ತಾಂತ್ರಿಕ ಸುಧಾರಣೆಗಳನ್ನು ತುರ್ತಾಗಿ ಕೈಗೊಳ್ಳುವಂತೆ ಮನವಿ ಮಾಡಿದರು.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಹಾಗೂ ದೂರಸಂಪರ್ಕ ಇಲಾಖೆಯ ಹಿರಿಯ ಅಧಿಕಾರಿಗಳು, ಉತ್ತರ ಕನ್ನಡ ಜಿಲ್ಲೆಯ ಜನರ ಹಿತದೃಷ್ಟಿಯಿಂದ ಈ ಎಲ್ಲ ಸಮಸ್ಯೆಗಳಿಗೆ ಶೀಘ್ರದಲ್ಲೇ ಸೂಕ್ತ ಪರಿಹಾರ ಕಲ್ಪಿಸುವ ಭರವಸೆ ನೀಡಿದರು ಎಂದು ಪ್ರಕಟಣೆ ತಿಳಿಸಿದೆ.
