ಸುದ್ದಿ ಕನ್ನಡ ವಾರ್ತೆ
ಜೋಯಿಡಾ ತಾಲೂಕಾ ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜೋಯಿಡಾ ಇವರ ಸಹಯೋಗದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜಯಂತ್ಯುತ್ಸವವನ್ನು ಅತ್ಯಂತ ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಎನ್. ಅವರು ಡಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ಆರಸು ಅವರ ಕುರಿತು ಮಾತನಾಡಿದರು
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ತಹಶೀಲ್ದಾರ್ ಮಂಜುನಾಥ ಮುನ್ನೋಳ್ಳಿ ಅವರು, “ಡಿ. ದೇವರಾಜ ಅರಸು ಅವರು ರಾಜ್ಯದಲ್ಲಿ ಕ್ರಾಂತಿಕಾರಕ ಭೂ ಸುಧಾರಣಾ ಕಾಯ್ದೆ ಮತ್ತು ಭೂನ್ಯಾಯಮಂಡಳಿಗಳನ್ನು ಸ್ಥಾಪಿಸುವ ಮೂಲಕ ಲಕ್ಷಾಂತರ ಭೂ,ರಹಿತ ಬಡ ರೈತರಿಗೆ ಭೂಮಿಯ ಹಕ್ಕನ್ನು ದೊರಕಿಸಿಕೊಟ್ಟ ಧೀಮಂತ ಜನನಾಯಕ ರಾಗಿದ್ದಾರೆ” ಎಂದು ಬಣ್ಣಿಸಿದರು.
ಮುಖ್ಯ ಉಪನ್ಯಾಸಕರಾಗಿ ಆಗಮಿಸಿದ್ದ ಬಿ. ಎಂ. ಸಾಣಿಕೊಪ್ಪ ಪದವಿ ಕಾಲೇಜಿನ ಪ್ರಾಚಾರ್ಯರಾದ ಆರ್. ಬಿ. ಹುಣಶೀಕಟ್ಟಿ ಅವರು, “ಅರಸು ಅವರು ಹಿಂದುಳಿದ ವರ್ಗಗಳ ನಿಜವಾದ ಹರಿಕಾರರಾಗಿದ್ದಾರೆ. ಭೂ ಸುಧಾರಣೆ, ಬಡ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್ ಸೌಲಭ್ಯ, ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಹಾಗೂ ಜೀತಪದ್ಧತಿ ನಿರ್ಮೂಲನೆಯಂತಹ ಐತಿಹಾಸಿಕ ಕೊಡುಗೆಗಳ ಮೂಲಕ ಅವರು ಶೋಷಿತ ವರ್ಗಗಳ ಏಳಿಗೆಗಾಗಿ ಜನಪರ ಆಡಳಿತ ನೀಡಿದ ಮಹಾನಾಯಕ” ಎಂದು ಸ್ಮರಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು . ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ನಜೀರ್ ಸಾಬ ಅಕ್ಕಿ ಅವರು ಇಡೀ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿ, ಸಹಕರಿಸಿದರು.
ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯ ಎಇಇ ಬಸವರಾಜ, ಜೋಯಿಡಾ ಗ್ರಾಮದ ಪ್ರಮುಖರಾದ ಚಂದ್ರಕಾಂತ ದೇಸಾಯಿ, ಗುರಪ್ಪ ಹಣಬರ, ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆನಂದ ಪಾಟೀಲ ಸೇರಿದಂತೆ ತಾಲೂಕಿನ ವಿವಿಧ ಹಾಸ್ಟೇಲ್‌ನ ನಿಲಯಪಾಲಕರು, ವಿದ್ಯಾರ್ಥಿಗಳು ಹಾಗೂ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
