ಸುದ್ದಿ ಕನ್ನಡ ವಾರ್ತೆ
ಕಾರವಾರ: ಕಾಳಿ ನದಿಯಿಂದ ಅಕ್ರಮವಾಗಿ ಉಸುಕು ತೆಗೆದು ಸಾಗಾಟ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಅಕ್ರಮ ಉಸುಕು ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಲಾರಿಗಳನ್ನು ವಶಕ್ಕೆ ಪಡೆಯುವುದು ಮಾತ್ರವಲ್ಲದೆ ಆ ದಾರಿಯ ನೋಂದಣಿಯನ್ನೇ ರದ್ದುಗೊಳಿಸಗಳಾಗುವುದು. ಈ ಕುರಿತಂತೆ ಈಗಾಗಲೇ ಆರ್ ಟಿ ಓ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲೆ ನೂತನ ಜಿಲ್ಲಾಧಿಕಾರಿ ಹರ್ಷಲ್ ಬೋಯೆಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಅಕ್ರಮ ಉಸುಕು ಸಾಗಾಟ ಪ್ರಕರಣದಲ್ಲಿ ಸಿಕ್ಕಿ ಬಿದ್ದಾಗ ಲಾರಿಗಳಿಗೆ ಕೇವಲ ದಂಡ ವಿಧಿಸಿ ಬಿಟ್ಟು ಕೊಡಲಾಗುತ್ತಿತ್ತು. ಆದರೆ ಇನ್ನು ಮುಂದೆ ಅಂತಹ ಲಾರಿಗಳನ್ನೇ ಸೀಜ್ ಮಾಡಲಾಗುವುದು, ಇಟೆಲದೆ ವಾಹನ ನೋಂದಣಿಯನ್ನು ರದ್ದುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದರು.
ಕಾರವಾರದ ಕಾಳಿ ನದಿಯಿಂದ ಅಕ್ರಮವಾಗಿ ಉಸುಕು ಮೇಲೆತ್ತಿ ಗೋವಾ ರಾಜ್ಯಕ್ಕೂ ಸಾಗಾಟ ಮಾಡುತ್ತಿರುವ ಕುರಿತು ಹಲವು ದೂರುಗಳು ಬಂದಿವೆ. ಈ ಕುರಿತಂತೆ ಈಗಾಗಲೇ ಅಧಿಕಾರಿಗಳ ಜೊತೆ ಸಭೆ ನಡೆಸಿ ಅಗತ್ಯ ಸೂಚನೆಯನ್ನು ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಇಂತಹ ಅಕ್ರಮಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.
