ಸುದ್ದಿಕನ್ನಡ ವಾರ್ತೆ
Goa : ಗೋವಾ ರಾಜ್ಯದಲ್ಲಿ ಸಚಿವ ಸಂಪುಟ ಪುನರ್ರಚನೆ ಕುರಿತು ಚರ್ಚೆಗಳು ನಡೆಯುತ್ತಿರುವಾಗಲೇ, ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರು ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ಹೊಸ ಕ್ರಿಮಿನಲ್ ಕಾನೂನು ಮತ್ತು ಗಣಿಗಾರಿಕೆ ಉದ್ಯಮಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಬಗ್ಗೆ ಕೇಂದ್ರ ಗೃಹ ಸಚಿವರಿಗೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಾವಂತ್ ಸುದ್ಧಿಗಾರರಿಗೆ ತಿಳಿಸಿದರು. ಆಡಳಿತ ಮತ್ತು ಅಭಿವೃದ್ಧಿ ಕುರಿತು ಕೇಂದ್ರ ಸಚಿವ ಅಮಿತ್ ಶಾ ಅವರಿಂದ ಮಾರ್ಗದರ್ಶನ ಪಡೆದಿದ್ದೇನೆ ಎಂದು ಮುಖ್ಯಮಂತ್ರಿ ಸಾವಂತ್ ಹೇಳಿದರು.

ಸಂಪುಟ ಪುನರ್ರಚನೆ ಶೀಘ್ರದಲ್ಲೇ ನಡೆಯಲಿದೆ ಎಂದು ಸ್ಪೀಕರ್ ರಮೇಶ್ ತವಡ್ಕರ್ ಸುಳಿವು ನೀಡಿದ ನಂತರ ಸಂಪುಟ ಪುನರ್ರಚನೆ ಕುರಿತ ಚರ್ಚೆಗಳು ರಾಜ್ಯದಲ್ಲಿ ಮತ್ತೆ ಆರಂಭವಾಗಿವೆ. ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರು ಮಾರ್ಚ್ 26 ರಂದು 2025-2026 ನೇ ಸಾಲಿನ ಬಜೆಟ್ ಅನ್ನು ಮಂಡಿಸಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.