ಸುದ್ದಿ ಕನ್ನಡ ವಾರ್ತೆ
ಶಿರಸಿ:ಹಳಿಯಾಳದ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ವಿರುದ್ಧ ಕಳೆದ ಹಲವು ದಿನಗಳಿಂದ ಕಬ್ಬು ಬೆಳೆಗಾರರು ನಡೆಸುತ್ತಿರುವ ಸತತ ಪ್ರತಿಭಟನೆ ಮತ್ತು ರಸ್ತೆ ತಡೆ ಹೋರಾಟದ ಬಗ್ಗೆ ನನಗೆ ಸಂಪೂರ್ಣ ಅರಿವಿದೆ. ರೈತರ ಈ ಹೋರಾಟ ನ್ಯಾಯಸಮ್ಮತವಾಗಿದೆ.
ಜೀವನ ನಿರ್ವಹಣೆಗಾಗಿ ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗದಿರುವುದು ಅತ್ಯಂತ ಖೇದಕರ.
ಕಾರ್ಖಾನೆಯವರು ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸದೆ ವಿಳಂಬ ಧೋರಣೆ ಅನುಸರಿಸುತ್ತಿರುವುದು ಖಂಡನೀಯ.
ಈ ಸಂದರ್ಭದಲ್ಲಿ, ನಾನು ಜಿಲ್ಲಾಡಳಿತಕ್ಕೆ ಮತ್ತು ವಿಶೇಷವಾಗಿ ಮಾನ್ಯ ಜಿಲ್ಲಾಧಿಕಾರಿಗಳಿಗೆ ತಕ್ಷಣ ಮಧ್ಯಪ್ರವೇಶಿಸಿ, ರೈತ ಮುಖಂಡರು ಮತ್ತು ಕಾರ್ಖಾನೆ ಆಡಳಿತ ಮಂಡಳಿಯ ನಡುವೆ ಲಿಖಿತ ಒಪ್ಪಂದದೊಂದಿಗೆ ಸಭೆ ನಡೆಸಿ, ರೈತರ ಸಮಸ್ಯೆಯನ್ನು ಪರಿಹರಿಸಲು ಮತ್ತು ನ್ಯಾಯ ಒದಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ.
ಕಬ್ಬು ನುರಿಸುವ ಕಾರ್ಯ ಆರಂಭವಾಗುತ್ತಿರುವ ಈ ಸಮಯದಲ್ಲಿ, ರೈತರ ಬೇಡಿಕೆಗಳು ಈಡೇರದಿದ್ದರೆ, ಕಾರ್ಖಾನೆ ಕಾರ್ಯಾರಂಭಕ್ಕೆ ಮತ್ತಷ್ಟು ಅಡ್ಡಿಯಾಗುವ ಸಾಧ್ಯತೆ ಇದೆ. ಇದು ರೈತರು ಮತ್ತು ಕಾರ್ಮಿಕರು ಇಬ್ಬರಿಗೂ ಸಮಸ್ಯೆಯಾಗಲಿದೆ. ಹಾಗಾಗಿ, ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ಜಿಲ್ಲಾಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ರೈತರ ಹಿತವನ್ನು ಕಾಪಾಡಲು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇನೆ ಎಂದು ಮಾಧ್ಯಮ ಪ್ರಕಟಣೆಯ ಮೂಲಕ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸದರು,ಉತ್ತರಕನ್ನಡ ಸೂಚಿಸಿದ್ದಾರೆ.
