ಸುದ್ದಿ ಕನ್ನಡ ವಾರ್ತೆ
Goa: ಉತ್ತರ ಗೋವಾದ ಕೋಲವಾಳೆ ಸೇತುವೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ದಂಪತಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮಾಹಿತಿಯ ಪ್ರಕಾರ, ಬಿಚೋಲಿಂ ತಾಲೂಕಿನ ಸಾಲ್‌-ಮಾಡ್ಲವಾಡಾ ನಿವಾಸಿಗಳಾದ ರೇಷ್ಮಾ ರಮೇಶ ರಾವತ್ ಹಾಗೂ ರಮೇಶ ರಾವತ್ ಅವರು ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮರಳು ಸಾಗಿಸುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅಪಘಾತದ ಬಳಿಕ ಸ್ಥಳಕ್ಕೆ ಪೊಲೀಸರು ಹಾಗೂ ಸ್ಥಳೀಯರು ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ದುರ್ಘಟನೆಯ ನಂತರ ಕೋಲವಾಳೆ ಸೇತುವೆ ಪ್ರದೇಶದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದು, ಭಾರೀ ವಾಹನಗಳ ಸಂಚಾರ ನಿಯಂತ್ರಣ ಹಾಗೂ ರಸ್ತೆ ಸುರಕ್ಷತಾ ಕ್ರಮಗಳನ್ನು ಬಲಪಡಿಸುವಂತೆ ಆಗ್ರಹಿಸಿದ್ದಾರೆ.