ಸುದ್ದಿ ಕನ್ನಡ ವಾರ್ತೆ
​ಅನಮೋಡ:ಗೋವಾ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ಅನಮೋಡ ಸಮೀಪದ ಕ್ಯಾಸಲ್ ರಾಕ್ ಕ್ರಾಸ್ ಬಳಿ ಮಂಗಳವಾರ ಮಧ್ಯರಾತ್ರಿ ಎರಡು ಸರಕು ಸಾಗಣೆ ಟ್ರಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ.
​ಅಪಘಾತದ ತೀವ್ರತೆಗೆ ಎರಡೂ ಟ್ರಕ್‌ಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನಗಳಿಗೆ ಭಾರೀ ಹಾನಿಯಾಗಿದೆ. ಅಪಘಾತದಲ್ಲಿ ಎರಡೂ ಟ್ರಕ್‌ಗಳ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಅವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

​ಅಪಘಾತದ ಪರಿಣಾಮ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಹಾನಿಗೊಳಗಾದ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಪುನಃ ಸುಗಮಗೊಳಿಸಿದರು.
​ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.