ಸುದ್ದಿ ಕನ್ನಡ ವಾರ್ತೆ

ಯಳಂದೂರು : ತಾಲ್ಲೂಕಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸುವ ವಿಶೇಷಚೇತನ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರ್ಕಾರದ ವತಿಯಿಂದ ಹಲವಾರು ಪ್ರೋತ್ಸಾಹದಾಯಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕುಮಾರಿ ಅವರು ತಿಳಿಸಿದರು.

ಚಾಮರಾಜನಗರ ಜಿಲ್ಲೆಯ ಯಳಂದೂರು ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ತಾಲ್ಲೂಕಿನ ಪ್ರೌಢ ಶಾಲೆಗಳ ವಿಶೇಷಚೇತನ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಶೇಷ ಚೇತನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿ ಅವರ ಆರೋಗ್ಯವನ್ನು ಕಾಪಾಡಬೇಕಾಗಿದ್ದು, ಈ ನಿಟ್ಟಿನಲ್ಲಿ ತಜ್ಞ ವೈದ್ಯರುಗಳ ಮೂಲಕ ಆರೋಗ್ಯ ತಪಾಸಣೆಯನ್ನು ನಡೆಸಲಾಗುತ್ತಿದೆ. ಆರೋಗ್ಯ ಸಮಸ್ಯೆಗಳಿರುವ ಮಕ್ಕಳಿಗೆ ಸೂಕ್ತ ಚಿಕಿತ್ಸೆಯನ್ನು ಕೊಡಿಸಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಪ್ರೌಢ ಶಾಲೆಗಳ 35 ವಿಶೇಷ ಚೇತನ ವಿದ್ಯಾರ್ಥಿಗಳಿಗೆ ತಜ್ಞ ವೈದ್ಯರು ತಪಾಸಣೆ ನಡೆಸಿದರು.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣಾಧಿಕಾರಿ ಶಾಂತರಾಜು, ಸಿ.ಆರ್.ಪಿ.ಗಳಾದ ರೇಚಣ್ಣ, ಶಶಿರೇಖಾ, ಭಾರತಿ, ತೇಜಸ್ವಿನಿ, ವಿಶೇಷ ಶಿಕ್ಷಣ ಸಂಪನ್ಮೂಲ ಶಿಕ್ಷಕರಾದ ಮಧು, ಲೀಲಾವತಿ, ಬಸವಣ್ಣ, ಇಲಾಖೆಯ ಫಿಜಿಯೋ ಥೆರಪಿಸ್ಟ್ ಗಳಾದ ಮಂಜು, ರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು. ವರದಿ ಎಸ್.ಪುಟ್ಟಸ್ವಾಮಿಹೊನ್ನೂರು ಚಾಮರಾಜನಗರ ಜಿಲ್ಲೆ