ಸುದ್ದಿ ಕನ್ನಡ ವಾರ್ತೆ
ನವದೆಹಲಿ: ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಅಡಿಕೆ ಸಾಗಿಸುತ್ತಿದ್ದ ಲಾರಿಗಳನ್ನು ತಡೆಹಿಡಿದಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಸಮಸ್ಯೆ ಕುರಿತು ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಶಾಸಕ ಹಾಗೂ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿ. ವೈ. ರಾಘವೇಂದ್ರ, ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ರಾಜ್ಯದ ಪ್ರಮುಖ ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳನ್ನು ತಡೆ ಹಿಡಿದಿರುವುದರಿಂದ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಲಕ್ಷಾಂತರ ಅಡಿಕೆ ಬೆಳೆಗಾರರು, ಸಹಕಾರಿ ಸಂಸ್ಥೆಗಳು ಹಾಗೂ ವ್ಯಾಪಾರಿಗಳು ಎದುರಿಸುತ್ತಿರುವ ಸಂಕಷ್ಟದ ಕುರಿತು ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಗಮನ ಸೆಳೆಯಲಾಯಿತು.
ವಿಷಯದ ಗಂಭೀರತೆಯನ್ನು ಮನಗಂಡ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಮುಂದಿನ ದಿನಗಳಲ್ಲಿ ಅಗತ್ಯ ದಾಖಲೆಗಳನ್ನು ಹೊಂದಿರುವ ಅಡಿಕೆ ಸಾಗಣೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವುದಾಗಿ ಸಭೆಗೆ ಭರವಸೆ ನೀಡಿದರು.
ಈ ಕುರಿತು ಮಾಹಿತಿ ನೀಡಿರುವ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಅಡಿಕೆ ಬೆಳೆಯು ಕರ್ನಾಟಕ ಸೇರಿದಂತೆ ಇಡೀ ದಕ್ಷಿಣ ಭಾರತದ ಲಕ್ಷಾಂತರ ರೈತ ಕುಟುಂಬಗಳ ಜೀವನಾಧಾರವಾಗಿದ್ದು, ಅಡಿಕೆ ಬೆಳೆಗಾರರ ಹಿತಾಸಕ್ತಿಯ ರಕ್ಷಣೆಗಾಗಿ ತಮ್ಮ ಪ್ರಯತ್ನಗಳು ನಿರಂತರವಾಗಿ ಮುಂದುವರಿಯಲಿವೆ ಎಂದು ತಿಳಿಸಿದ್ದಾರೆ.
