ಸುದ್ದಿ ಕನ್ನಡ ವಾರ್ತೆ
​ಮುಂಬೈ: ಘಜಿನಿ, ಲಗಾನ್, ಸರ್ಫರೋಷ್ ಸೇರಿದಂತೆ ಹಲವು ಜನಪ್ರಿಯ ಚಿತ್ರಗಳಲ್ಲಿ ಖಳನಾಯಕನಾಗಿ ಮಿಂಚಿದ್ದ ಹಿರಿಯ ನಟ ಪ್ರದೀಪ ರಾವತ್ ಅವರು ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತು ಮಂಗಳವಾರ (ಆಗಸ್ಟ್ 4) ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಕ್ಯಾನ್ಸರ್ ಮರುಕಳಿಸಿದ್ದರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

​ಪ್ರದೀಪ ರಾವತ್ ಅವರು ಹಿಂದಿ, ತೆಲುಗು, ತಮಿಳು, ಕನ್ನಡ ಸೇರಿದಂತೆ ಹಲವು ಭಾರತೀಯ ಭಾಷೆಗಳ ಚಿತ್ರಗಳಲ್ಲಿ ಅಭಿನಯಿಸಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಘಜಿನಿ ಚಿತ್ರದ ಖಳನಾಯಕ ಪಾತ್ರದ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದರು. ಕನ್ನಡದಲ್ಲಿ ಅಭಯ್, ಗಜ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿ ಕನ್ನಡ ಸಿನಿ ರಸಿಕರ ಮನ ಗೆದ್ದಿದ್ದರು. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.