ಸುದ್ದಿ ಕನ್ನಡ ವಾರ್ತೆ
ನವದೆಹಲಿ: ಕನ್ನಡ ಚಿತ್ರರಂಗದ ಹಿರಿಯ ನಟ, ಉತ್ತರ ಕನ್ನಡ ಮೂಲದ ಅನಂತ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೆಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ.
ಭಾರತೀಯ ಚಿತ್ರರಂಗಕ್ಕೆ ಅವರು ನೀಡಿರುವ ದೀರ್ಘಕಾಲದ ಕೊಡುಗೆ ಹಾಗೂ ಹಲವು ದಶಕಗಳ ಕಲಾ ಪಯಣವನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಅನಂತನಾಗ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರದ ಮಾಹಿತಿ ತಿಳಿಸಿದೆ.
ಸಪ್ಟೆಂಬರ್ 22ರಂದು ಪ್ರಶಸ್ತಿ ಪ್ರದಾನ
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಸೆಪ್ಟೆಂಬರ್ 22ರಂದು ಗುಜರಾತ್‌ನ ಏಕ್ತಾನಗರ (ಕೆವಾಡಿಯಾ)ದಲ್ಲಿ ನಡೆಯಲಿದ್ದು ಇದೇ ಸಂದರ್ಭದಲ್ಲಿ ಅನಂತನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಧಾನವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಅನಂತನಾಗ್ ಅವರ ಸಹಜ ಅಭಿನಯ, ವಿಭಿನ್ನ ಪಾತ್ರಗಳನ್ನು ನಿರ್ವಹಿಸುವ ಸಾಮರ್ಥ್ಯ ಹಾಗು ದಶಕಗಳ ಕಾಲ ಕನ್ನಡ ಸೇರಿದಂತೆ ಭಾರತೀಯ ಚಿತ್ರರಂಗದಲ್ಲಿ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗುತ್ತಿದೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯವರಾದ ಅನಂತನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆಯಾಗಿರುವುದು ಜಿಲ್ಲೆಯ ಜನರಲ್ಲಿ ಸಂತಸ ಮೂಡಿಸಿದೆ.
ತಮ್ಮ ಅಭಿನಯದ ಮೂಲಕ ಕನ್ನಡಿಗರ ಮನದಲ್ಲಿ ದಶಕಗಳಿಂದ ಸ್ಥಾನ ಪಡೆದಿರುವ ಅನಂತನಾಗ್ ಅವರ ಸಾಧನೆಗೆ ಈ ಪ್ರಶಸ್ತಿ ಮತ್ತೊಂದು ಮಹತ್ವದ ಗೌರವವಾಗಿದೆ.
