ಸುದ್ದಿ ಕನ್ನಡ ವಾರ್ತೆ
ಮೈಸೂರು:ನಾಡಿನ ವಿಶ್ವವಿಖ್ಯಾತ ನಾಡಹಬ್ಬ ಮೈಸೂರಿನ ದಸರಾ ಮಹೋತ್ಸವಕ್ಕೆ ಇಂದು ಭಾನುವಾರ ಅಕ್ಟೋಬರ 11,2026 ರಂದು ಚಾಮುಂಡಿ ಬೆಟ್ಟದಲ್ಲಿ ಅತ್ಯಂತ ಅದ್ಧೂರಿಯಾಗಿ ಅಧಿಕೃತ ಚಾಲನೆ ನೀಡಲಾಯಿತು.
ಕೊಪ್ಪಳದ ಗವಿಮಠದ ಪರಮ ಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು ಶುಭ ಧನುರ್ ಲಗ್ನದಲ್ಲಿ ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಷಾರ್ಚನೆ ಮಾಡುವ ಮೂಲಕ ಈ ಬಾರಿಯ ಸಾಂಸ್ಕೃತಿಕ ಹಬ್ಬಕ್ಕೆ ಮುನ್ನುಡಿ ಬರೆದರು. ಈ ಭವ್ಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ,ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ,ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಅನೇಕ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.
ಮೈಸೂರಿನಲ್ಲಿ 2026ರ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದ್ದು, ಅಕ್ಟೋಬರ್ 11ರ ಭಾನುವಾರ ವೈವಿಧ್ಯಮಯ ಕಾರ್ಯಕ್ರಮಗಳು ಆಯೋಜನೆಗೊಂಡಿವೆ. ಫಲಪುಷ್ಪ ಪ್ರದರ್ಶನ, ಆಹಾರ ಮೇಳ, ಕುಸ್ತಿ ಪಂದ್ಯಾವಳಿ, ಸಾಂಸ್ಕೃತಿಕ ವೈಭವ ಹಾಗೂ ಆಕರ್ಷಕ ದೀಪಾಲಂಕಾರಗಳು ಸೇರಿದಂತೆ ಹಲವು ಕಾರ್ಯಕ್ರಮಗಳು ಈ ಬಾರಿಯ ದಸರಾ ಸಂಭ್ರಮಕ್ಕೆ ವಿಶೇಷ ಮೆರಗು ನೀಡಲಿವೆ.
