ಕಾರವಾರ:- ರಾಜ್ಯದಲ್ಲಿ ಅತೀ ಹೆಚ್ಚು ಪೋಕ್ಸೋ ಪ್ರಕರಣ ಗಳು 18 ವರ್ಷದೊಳಗಿನ ವಯೋಮಿತಿಯಲ್ಲಿ ಕಂಡು ಬರುತ್ತಿರುವುದರಿಂದ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಾಗ್ರತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಜಾಗೃತಿ ಮೂಡಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷೆತ ವಹಿಸಿ ಮಾತನಾಡಿದರು.
18 ವರ್ಷದೊಳಗಿನವರೂ ಕೂಡಾ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ವ್ಯಾಪ್ತಿಗೆ ಬರಲಿದ್ದು, ಜಿಲ್ಲೆಯಲ್ಲಿ ಈ ವರ್ಷ ಇದುವರೆಗೆ 44 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪೋಕ್ಸೋ ಪ್ರಕರಣಗಳಿಗೆ ಸಿಲುಕುತ್ತಿದ್ದಾರೆ. ಟೀನೇಜ್ ಪ್ರೆಗ್ನೆನ್ಸಿ ಪ್ರಕರಣಗಳು ಹೆಚ್ಚು ಕಂಡು ಬರುತ್ತಿವೆ.
ಆದ್ದರಿಂದ ಎಲ್ಲಾ ಪದವಿ ಪೂರ್ವ ಕಾಲೇಜುಗಳು, ಐ.ಟಿ.ಐ . ಡಿಪ್ಲೋಮೋ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಪೋಕ್ಸೋ ಕುರಿತಂತೆ ಹೆಚ್ಚಿನ ಅರಿವು ಮೂಡಿಸಬೇಕು ಎಂದ ಅವರು, ಈ ಕಾಲೇಜುಗಳ ಪ್ರಾಂಶುಪಾಲರಿಗೆ ಮಕ್ಕಳ ರಕ್ಷಣಾ ನೀತಿ ಮತ್ತು ಪೊಕ್ಸೋ ಕಾಯಿದೆ ಬಗ್ಗೆ ತರಬೇತಿ ಆಯೋಜಿಸಿ, ಕಾಲೇಜುಗಳಲ್ಲಿ ಕಡ್ಡಾಯವಾಗಿ ಪಾಲಿಸಬೇಕಾದ ಕ್ರಮಗಳ ಕುರಿತಂತೆ ತಿಳಿಸಬೇಕು ಎಂದರು.
ಹದಿಹರೆಯದ ವಿದ್ಯಾರ್ಥಿಗಳು ಪೋಕ್ಸೋ ಪ್ರಕರಣದಲ್ಲಿ ಸಿಲುಕಲು ಶೇ. 70 ರಷ್ಟು ಸೋಷಿಯಲ್ ಮೀಡಿಯಾಗಳ ಬಳಕೆ ಕಾರಣವಾಗಿದ್ದು, ವಿದ್ಯಾರ್ಥಿಗಳಿಗೆ ಸುರಕ್ಷಿತ ರೀತಿಯಲ್ಲಿ ಮೊಬೈಲ್ ಬಳಕೆ ಮಾಡುವ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಮನೆಗಳಲ್ಲಿ ಪೋಷಕರು ಜಾಗೃತಿ ಮೂಡಿಸಬೇಕಿದೆ ಎಂದರು.