ಸುದ್ದಿ ಕನ್ನಡ ವಾರ್ತೆ
ಸಾಗರ: ತಾಲೂಕಿನ ಆನಂದಪುರ ಸಮೀಪದ ಡ್ಯಾಮ್ ಹೊಸೂರು ಹಾಗೂ ಅಂಬಲಿಗೋಳ ಮಧ್ಯದ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಏಕಾಏಕಿ ಬೆಂಕಿಗೆ ಆಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಮಾಹಿತಿಯ ಪ್ರಕಾರ, ಶಿಕಾರಿಪುರದಿಂದ ಆಯನೂರು ಸಮೀಪದ ಹಣಗೆರೆ ಕಟ್ಟೆಯತ್ತ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಏಕಾಏಕಿ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ. ಪರಿಸ್ಥಿತಿಯನ್ನು ಗಮನಿಸಿದ ಚಾಲಕ ಕೂಡಲೇ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿದ್ದು, ಕಾರಿನಲ್ಲಿದ್ದ ಓರ್ವ ಪುರುಷ, ಮೂವರು ಮಹಿಳೆಯರು ಹಾಗೂ ಮಕ್ಕಳು ಸುರಕ್ಷಿತವಾಗಿ ಹೊರಬಂದಿದ್ದಾರೆ ಎಂದು ತಿಳಿದುಬಂದಿದೆ.
ನೋಡನೋಡುತ್ತಿದ್ದಂತೆಯೇ ಬೆಂಕಿ ಕಾರಿನೆಲ್ಲೆಡೆ ವ್ಯಾಪಿಸಿ ವಾಹನ ಸಂಪೂರ್ಣವಾಗಿ ಉರಿದುಹೋಗಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದ್ದು, ಕಾರಿಗೆ ಬೆಂಕಿ ತಗುಲಲು ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಈ ಘಟನೆ ಶಿಕಾರಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
