ಸುದ್ದಿ ಕನ್ನಡ ವಾರ್ತೆ

​ಉತ್ತರ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಇಂದಿನಿಂದ ಒಂದು ಆಶಾದಾಯಕ ಸುದ್ದಿ ಲಭಿಸಿದೆ. ಜಿಲ್ಲೆಯ ರೈತರು ದೀರ್ಘಕಾಲದಿಂದ ನಿರೀಕ್ಷಿಸುತ್ತಿದ್ದ ಹವಾಮಾನ ಆಧಾರಿತ ಬೆಳೆ ವಿಮೆಯ ಮೊತ್ತವು ಇಂದಿನಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲು ಪ್ರಾರಂಭವಾಗಿದೆ. ಮೊದಲ ಹಂತವಾಗಿ ಇಂದು ಸುಮಾರು 14 ಕೋಟಿ ರೂಪಾಯಿಗಳಷ್ಟು ಬೃಹತ್ ಮೊತ್ತವು ಅರ್ಹ ರೈತರ ಖಾತೆಗಳನ್ನು ತಲುಪಿದ್ದು, ಈ ಪ್ರಕ್ರಿಯೆಯು ಇಂದಿನಿಂದ ಸತತವಾಗಿ ಮುಂದುವರಿಯಲಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

​ಜಿಲ್ಲೆಯ ಬೆಳೆಗಾರರು ಈಗಾಗಲೇ ಎಲೆ ಚುಕ್ಕಿ ರೋಗದ ಬಾಧೆ ಮತ್ತು ಇಳುವರಿ ಕುಂಠಿತಗೊಂಡ ಕಾರಣದಿಂದ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು. ಸಕಾಲದಲ್ಲಿ ಬರಬೇಕಿದ್ದ ವಿಮಾ ಮೊತ್ತವು ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದರಿಂದ ರೈತರು ಕಂಗಾಲಾಗಿದ್ದರು. ಆದರೆ ಈಗ ವಿಮೆ ವಿತರಣೆ ಆರಂಭವಾಗಿರುವುದು ಜಿಲ್ಲೆಯ ಕೃಷಿಕರಲ್ಲಿ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. ರೈತರ ಈ ಸಂಕಷ್ಟಕ್ಕೆ ಸ್ಪಂದಿಸಿ, ಬೆಳೆ ವಿಮೆಯನ್ನು ಶೀಘ್ರವಾಗಿ ಕೊಡಿಸಲು ಶ್ರಮಿಸಿದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ, ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಹಾಗೂ ಈ ಪ್ರಕ್ರಿಯೆಯಲ್ಲಿ ಸಹಕರಿಸಿದ ರಾಜ್ಯದ ಎಲ್ಲಾ  ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
ಉತ್ತರ ಕನ್ನಡ ಜಿಲ್ಲೆಯ ಪ್ರತಿಯೊಬ್ಬ ಅರ್ಹ ರೈತರಿಗೂ ಈ ವಿಮೆಯ ಸೌಲಭ್ಯ ಹಂತ ಹಂತವಾಗಿ ತಲುಪಲಿದ್ದು, ಸಂಕಷ್ಟದ ಸಮಯದಲ್ಲಿ ಇದು ರೈತರಿಗೆ ದೊಡ್ಡ ಆಸರೆಯಾಗಲಿದೆ ಎಂದು ಸಂಸದ ಕಾಗೇರಿ ಅಭಿಪ್ರಾಯ ಪಟ್ಟಿದ್ದಾರೆ.