ಸುದ್ದಿ ಕನ್ನಡ ವಾರ್ತೆ
ಬೆಂಗಳೂರು:ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರಸ್ತಾಪಿತ ಪಶ್ಚಿಮ ಘಟ್ಟದ ಜೀವವೈವಿಧ್ಯದ ದೃಷ್ಟಿಯಿಂದ ಅತ್ಯಂತ ಸೂಕ್ಷ್ಮವೆನಿಸಿರುವ ಬೇಡ್ತಿ ಮತ್ತು ಅಘನಾಶಿನಿ ನದಿಗಳ ಜೋಡಣೆ ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಿ,ಸೋಮವಾರ ಬೇಡ್ತಿ-ಅಘನಾಶಿನಿಕೊಳ್ಳ ಸಂರಕ್ಷಣಾ ಸಮಿತಿಯ ನಿಯೋಗವು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿತು.

ಈ ಯೋಜನೆಯಿಂದ ಪಶ್ಚಿಮ ಘಟ್ಟದ ಸಾವಿರಾರು ಎಕರೆ ಅರಣ್ಯ ಪ್ರದೇಶ ನಾಶವಾಗಲಿದ್ದು, ಅಪರೂಪದ ಸಸ್ಯ ಹಾಗೂ ಪ್ರಾಣಿ ಸಂಕುಲಕ್ಕೆ ಧಕ್ಕೆಯಾಗಲಿದೆ ಎಂದು ನಿಯೋಗವು ಆತಂಕ ವ್ಯಕ್ತಪಡಿಸಿತು. ಉತ್ತರ ಕನ್ನಡ ಜಿಲ್ಲೆಯ ಜನರ ಭಾವನೆಗಳಿಗೆ ಬೆಲೆ ನೀಡಿ, ಅವೈಜ್ಞಾನಿಕವಾಗಿರುವ ಈ ಯೋಜನೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಮನವಿ ಸಲ್ಲಿಸಲಾಯಿತು. ಅಷ್ಟೇ ಅಲ್ಲದೆ, ನೀರಾವರಿ ಯೋಜನೆಗಳಿಗಾಗಿ ಪರಿಸರಕ್ಕೆ ಹಾನಿಯಾಗದಂತಹ ಪರ್ಯಾಯ ದಾರಿಗಳನ್ನು ಹುಡುಕುವಂತೆ ಸಮಿತಿಯು ಸರ್ಕಾರವನ್ನು ಒತ್ತಾಯಿಸಿತು.
ಬೇಡ್ತಿ ಮತ್ತು ಅಘನಾಶಿನಿ ನದಿಗಳು ಜಿಲ್ಲೆಯ ಜೀವನಾಡಿಗಳಾಗಿದ್ದು, ಇವುಗಳನ್ನು ತಿರುಗಿಸುವ ಅಥವಾ ಜೋಡಿಸುವ ಪ್ರಯತ್ನವು ಪರಿಸರದ ಸಮತೋಲನವನ್ನು ಕದಡಲಿದೆ. ಈ ಕುರಿತು ವಿಸ್ತ್ರತವಾಗಿ ಚರ್ಚಿಸಿ ಯೋಜನೆಯನ್ನು ಕೈಬಿಡಬೇಕು ಎಂದು ಆಯೋಗ ಇದೇ ಸಂದರ್ಭದಲ್ಲಿ ಆಗ್ರಹಿಸಿದರು. ವಿಧಾನಸೌಧದಲ್ಲಿ ನಡೆದ ಈ ಭೇಟಿಯ ನೇತೃತ್ವವನ್ನು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ ವೈದ್ಯ ಅವರು ವಹಿಸಿದ್ದರು. ನಿಯೋಗದಲ್ಲಿ ಸಮಿತಿಯ ಅಧ್ಯಕ್ಷರಾದ ಪರಿಸರವಾದಿ ಅನಂತ ಹೆಗಡೆ ಆಶೀಸರ,ಶಾಸಕರಾದ ದಿನಕರ ಶೆಟ್ಟಿ,ಭೀಮಣ್ಣ ನಾಯ್ಕ, ಶಿವರಾಮ ಹೆಬ್ಬಾರ,ವಿಧಾನ ಪರಿಷತ್ತಿನ ಸದಸ್ಯರಾದ ಶಾಂತರಾಮ ಸಿದ್ದಿ ಹಾಗೂ ಜಿಲ್ಲೆಯ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.