ಸುದ್ದಿ ಕನ್ನಡ ವಾರ್ತೆ
ಕುಮಟಾ:ಪಟ್ಟಣದ ಇಬ್ಬರು ಅಪ್ರಾಪ್ತ ಬಾಲಕರು ಬೈಕ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ, ಇಬ್ಬರು ಪಾಲಕರಿಗೆ ಕುಮಟಾ ಜೆ.ಎಂ.ಎಫ್.ಸಿ ನ್ಯಾಯಾಲಯ ಒಟ್ಟು 54 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.
ಕುಮಟಾ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಪೊಲೀಸ್ ತಪಾಸಣೆ ನಡೆಸುತ್ತಿದ್ದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಕುಮಟಾ ಪೊಲೀಸ್ ನಿರೀಕ್ಷಕ ಯೋಗೇಶ ಕೆ.ಎಂ. ನೇತೃತ್ವದಲ್ಲಿ ನಡೆದ ವಾಹನ ತಪಾಸಣೆ ವೇಳೆ, ಬಾಲಕ ಚಲಾಯಿಸುತ್ತಿದ್ದ ಬೈಕ್ನ್ನು ಪೊಲೀಸರು ವಶಪಡಿಸಿಕೊಂಡರು. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಪೂರ್ಣಗೊಂಡ ಬಳಿಕ ಬೈಕ್ ಮಾಲಕರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪತ್ರ ಸಲ್ಲಿಸಲಾಯಿತು.
ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ನೀಡಿದ ಹಿನ್ನೆಲೆಯಲ್ಲಿ ನ್ಯಾಯಾಲಯವು ಇವರನ್ನು ತಪ್ಪಿತಸ್ಥರೆಂದು ಪರಿಗಣಿಸಿ ದಂಡ ವಿಧಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರ ಸೂಚನೆ ಮೇರೆಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಮತ್ತು ಭಟ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬಿ. ಗಿರೀಶ್ ಅವರ ಮಾರ್ಗದರ್ಶನದಲ್ಲಿ ಕುಮಟಾ ಪೊಲೀಸ್ ಠಾಣೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
