ಸುದ್ದಿ ಕನ್ನಡ ವಾರ್ತೆ
ಹೊನ್ನಾವರ: ತಾಲೂಕಿನ
ಹಳದೀಪುರ ಅಗ್ರಹಾರದ ಸಮೀಪ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಗುರುವಾರ ರಾತ್ರಿ ನಡೆದಿದೆ.
ಮೃತರನ್ನು ನವಿಲಗೋಣ ಗ್ರಾಮದ ನಿವಾಸಿ ವೆಂಕಟೇಶ ಗೋಪಾಲಕೃಷ್ಣ ವೈದ್ಯ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಇವರು, ಗುರುವಾರ ರಾತ್ರಿ ತಮ್ಮ ಮನೆಯಿಂದ ಹಳದೀಪುರಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಕೆ.ಎಸ್.ಆರ್.ಟಿ.ಸಿ ಬಸ್ಥೆ ಇವರ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ.
ಬೈಕ್ ಸವಾರ ವೆಂಕಟೇಶ ಅವರು ಹೆಲ್ಮಟ್ ಧರಿಸಿರಲಿಲ್ಲ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಅವರ ತಲೆ ಭಾಗಕ್ಕೆ ಗಂಭೀರವಾದ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು, ಅಪಘಾತದ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
