ಸುದ್ದಿ ಕನ್ನಡ ವಾರ್ತೆ
ಶಿರಸಿ: ನಗರದ ಮಾರ್ಕೆಟ್ ಠಾಣೆಯಲ್ಲಿ ಕ್ರೈಮ್ ಪಿಎಸ್‌ಐ ಆಗಿ ಅತ್ಯಂತ ದಿಟ್ಟತನ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುತ್ತಿರುವ ರಾಜಕುಮಾರ್ ಉಕ್ಕಲಿ ಅವರು 2025ನೇ ಸಾಲಿನ ಪ್ರತಿಷ್ಠಿತ ಮುಖ್ಯಮಂತ್ರಿಯವರ ಪದಕಕ್ಕೆ ಭಾಜನರಾಗಿದ್ದಾರೆ.
ಕಲಬುರ್ಗಿ ಜಿಲ್ಲೆಯ ಅಪಜಲಪುರ ತಾಲೂಕಿನ ಗುಟ್ಟೇವಾಡಿ ಗ್ರಾಮದವರಾದ ರಾಜಕುಮಾರ ಉಕ್ಕಲಿ ಅವರು, 2016ನೇ ಬ್ಯಾಚ್‌ನಲ್ಲಿ ಪೊಲೀಸ್ ಉಪನಿರೀಕ್ಷಕರಾಗಿ ಸೇವೆಗೆ ಸೇರ್ಪಡೆಗೊಂಡಿದ್ದರು.
ಸೇವಾ ಅವಧಿಯಲ್ಲಿ ಬೆಂಗಳೂರಿನ ಕೆಂಪೇಗೌಡ, ಸಿದ್ದಾಪುರ, ಪುತ್ತೂರು, ಹಳಿಯಾಳ ಹಾಗೂ ಶಿರಸಿ ನಗರ ಪೊಲೀಸ್ ಠಾಣೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ತನಿಖಾ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿರುವ ಅವರು, ಧರ್ಮಸ್ಥಳ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ರಚಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ)ಯಲ್ಲೂ ಸೇವೆ ಸಲ್ಲಿಸಿದ್ದರು. ವಿಧಿ ವಿಜ್ಞಾನ ಕ್ಷೇತ್ರದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವುದು ಅವರ ಸಾಧನೆಗೆ ಮತ್ತೊಂದು ಮೆರುಗು ನೀಡಿದೆ. ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಶ್ರೇಷ್ಠ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಅವರನ್ನು ಮುಖ್ಯಮಂತ್ರಿ ಬಂಗಾರದ ಪದಕಕ್ಕೆ ಆಯ್ಕೆ ಮಾಡಿದೆ. ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ಪಿಎಸ್‌ಐ ರಾಜಕುಮಾರ್ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿರುವುದಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್, ಡಿವೈಎಸ್ಪಿ ಗೀತಾ ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಅಭಿನಂದನೆ ಸಲ್ಲಿಸಿ, ಅವರ ಮುಂದಿನ ವೃತ್ತಿಜೀವನಕ್ಕೆ ಶುಭ ಹಾರೈಸಿದ್ದಾರೆ.
