ಸುದ್ದಿ ಕನ್ನಡ ವಾರ್ತೆ
ಜೋಯಿಡಾ: ತಾಲೂಕಿನ ಅಸು ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಿಂದೋಳಿ ಶಾಲೆಯಲ್ಲಿ ಸಂವಿಧಾನ ಶಿಲ್ಪಿ,ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ 135 ನೇ ಜನ್ಮದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಶಿಕ್ಷಕ ವೃಂದ ಹಾಗೂ ಮಕ್ಕಳಿಂದ ಡಾ.ಬಿ.ಆರ್ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕರಾದ ಅನಿಲ ರಾಠೋಡರವರು ಇಂದು ಏಪ್ರಿಲ್ 14, ಭಾರತದ ಸಂವಿಧಾನ ಶಿಲ್ಪಿ, ಮಹಾನ್ ಜ್ಞಾನಿ, ಡಾ. ಭೀಮರಾವ್ ಅಂಬೇಡ್ಕರ್ ಅವರ ಜನ್ಮದಿನ. ಅವರ 135ನೇ ಜಯಂತಿಯ ಈ ಶುಭ ಸಂದರ್ಭದಲ್ಲಿ, ಅವರ ಆದರ್ಶಗಳನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ.
ಬಾಬಾಸಾಹೇಬರು 1891ರ ಏಪ್ರಿಲ್ 14ರಂದು ಮಧ್ಯಪ್ರದೇಶದ ಮಹುವಿನಲ್ಲಿ ಜನಿಸಿದರು. ಸಾಮಾಜಿಕ ಅಸಮಾನತೆ, ತಾರತಮ್ಯಗಳನ್ನು ಎದುರಿಸಿ, ಬಡತನದ ನಡುವೆಯೂ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆದು, ಅರ್ಥಶಾಸ್ತ್ರ, ಕಾನೂನು ಮತ್ತು ರಾಜಕೀಯ ಶಾಸ್ತ್ರದಲ್ಲಿ ಅಪಾರ ಪಾಂಡಿತ್ಯ ಗಳಿಸಿದರು.ಸ್ವತಂತ್ರ ಭಾರತದ ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ, ಜಾತಿ, ಮತ, ಲಿಂಗ ಭೇದವಿಲ್ಲದೆ ಎಲ್ಲರಿಗೂ ಸಮಾನ ಹಕ್ಕು, ಸ್ವಾತಂತ್ರ್ಯ ಮತ್ತು ಅವಕಾಶಗಳನ್ನು ಕಲ್ಪಿಸಿಕೊಟ್ಟರು. ಭಾರತದೆ ಪ್ರಜಾಪ್ರಭುತ್ವದ ಅಡಿಪಾಯವೇ ಅಂಬೇಡ್ಕರ್ ಅವರು.”ಶಿಕ್ಷಿತರಾಗಿ, ಸಂಘಟಿತರಾಗಿ, ಹೋರಾಡಿ” ಎಂಬ ಮಂತ್ರ ನೀಡಿದ ಅಂಬೇಡ್ಕರ್ ಅವರು, ಶೋಷಿತರು, ದಲಿತರು ಮತ್ತು ಮಹಿಳೆಯರ ಹಕ್ಕುಗಳಿಗಾಗಿ ಸತತವಾಗಿ ಹೋರಾಡಿದರು. ಅಸ್ಪೃಶ್ಯತೆ ನಿರ್ಮೂಲನೆಗೆ ಶ್ರಮಿಸಿದರು. ನಾವೆಲ್ಲರೂ ಬದ್ಧರಾಗೋಣ. ಬಾಬಾಸಾಹೇಬರಿಗೆ ಗೌರವ ಸಲ್ಲಿಸೋಣ ಎಂದು ಹೇಳಿದರು.
ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
