Banner Ad

ಸುದ್ದಿ ಕನ್ನಡ ವಾರ್ತೆ
ಶಿರಸಿ: ಕಳೆದ ಕೆಲವು ತಿಂಗಳಿನಿಂದ ಸ್ಥಗಿತಗೊಂಡಿದ್ದ ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಶುಕ್ರವಾರದಿಂದ ಪುನಾರಂಭಗೊಂಡಿದ್ದು, ಸಾರ್ವಜನಿಕರಲ್ಲಿ ಕೆಲಮಟ್ಟಿನ ನಿರಾಳತೆ ಮೂಡಿಸಿದೆ.

ಕೇಂದ್ರ ಸರ್ಕಾರದ ಸಾಗರಮಾಲಾ ಯೋಜನೆಯಡಿ ನಾಲ್ಕು ವರ್ಷಗಳ ಹಿಂದೆ ಶಿರಸಿ-ಹಾವೇರಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು, ಸುಮಾರು 80 ಕಿಲೋಮೀಟರ್ ಉದ್ದದ ಈ ಹೆದ್ದಾರಿ ನಿರ್ಮಾಣಕ್ಕೆ 177 ಕೋಟಿ ರೂ. ಅನುದಾನ ಮಂಜೂರಾಗಿತ್ತು. ಅಡೆತಡೆಗಳು ನಿವಾರಣೆಯಾದ ಬಳಿಕ ಒಂದು ವರ್ಷದ ಹಿಂದೆ ಕಾಮಗಾರಿ ಆರಂಭಗೊಂಡಿದ್ದರೂ, ಮಧ್ಯಂತರದಲ್ಲಿ ಹಲವು ಕಾರಣಗಳಿಂದ ಸ್ಥಗಿತಗೊಂಡಿತ್ತು. ಶಿರಸಿಯಿಂದ ಮಳಲಗಾಂವವರೆಗೆ ರಸ್ತೆ ಅಗೆದು ಬಿಟ್ಟ ಸ್ಥಿತಿಯಲ್ಲಿ ಉಳಿದಿದ್ದರಿಂದ ವಾಹನ ಸವಾರರು ಹಾಗೂ ಸ್ಥಳೀಯ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದರು. ಧೂಳು ಸಮಸ್ಯೆಯಿಂದಾಗಿ ಅನಾರೋಗ್ಯ ಪ್ರಕರಣಗಳು ಹೆಚ್ಚಾಗಿದ್ದು, ದಿನನಿತ್ಯದ ಸಂಚಾರಕ್ಕೂ ತೀವ್ರ ಅಡಚಣೆ ಉಂಟಾಗಿತ್ತು. ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಜನಪ್ರತಿನಿಧಿಗಳು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

Banner Ad

ಸ್ಥಳೀಯರು ರಸ್ತೆ ಸಂಚಾರ ಸ್ಥಗಿತಗೊಳಿಸಿ ಹೋರಾಟದ ಹಾದಿ ಹಿಡಿದಿದ್ದು, ಸಮಸ್ಯೆಯನ್ನು ತೀವ್ರಗೊಳಿಸಿತ್ತು. ಈ ಹಿನ್ನೆಲೆ ಎಚ್ಚೆತ್ತುಕೊಂಡ ಪ್ರಾಧಿಕಾರ ಹಾಗೂ ಗುತ್ತಿಗೆ ಕಂಪೆನಿ ಶುಕ್ರವಾರದಿಂದ ಡಾಂಬರೀಕರಣ ಕಾಮಗಾರಿಯನ್ನು ಪುನಾರಂಭಿಸಿದೆ.

ಮಳೆಗಾಲ ಆರಂಭವಾಗುವ ಮುನ್ನ ಅಗೆದಿರುವ ಸುಮಾರು 8 ಕಿಲೋಮೀಟರ್ ಹೆದ್ದಾರಿ ಕಾಮಗಾರಿಯನ್ನು ವೇಗಗೊಳಿಸಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಯಾವುದೇ ತಾಂತ್ರಿಕ ಅಥವಾ ಆಡಳಿತಾತ್ಮಕ ಅಡಚಣೆಗಳು ಎದುರಾದರೂ ಅವನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

Banner Ad