ಸುದ್ದಿ ಕನ್ನಡ ವಾರ್ತೆ
ಕಾರವಾರ: ಕರಾವಳಿ ಭಾಗದಲ್ಲಿ ಮುಂಗಾರು ವೇಗಪಡೆದುಕೊಂಡಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಉತ್ತರಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

​ಉತ್ತರಕನ್ನಡ ಜಿಲ್ಲೆಯಲ್ಲಿ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಹಾಗೂ ಅತಿಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನದಿ, ಹೊಳೆ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಸ್ಥಳೀಯ ಆಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

​ಅರಬ್ಬಿ ಸಮುದ್ರದಲ್ಲಿ ವಾತಾವರಣ ಪ್ರಕ್ಷುಬ್ಧಗೊಂಡಿರುವುದರಿಂದ ಸಮುದ್ರದಲ್ಲಿ ಬಲವಾದ ಗಾಳಿ ಮತ್ತು ಎತ್ತರದ ಅಲೆಗಳು ಉಂಟಾಗುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.