ಸುದ್ದಿ ಕನ್ನಡ ವಾರ್ತೆ
​ಮುಂಡಗೋಡ: ತಾಲೂಕಿನ ಕಾವಲಕೊಪ್ಪ ಸಮೀಪದ ಶರೀಫಜ್ಜನ ದೇವಸ್ಥಾನದ ಬಳಿಯ ಇಳಿಜಾರಿನ ತಿರುವಿನಲ್ಲಿ ಭಾನುವಾರ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಮಹಿಳೆಯರು ಹಾಗೂ ಮಕ್ಕಳ ಸಂಖ್ಯೆಯೇ ಹೆಚ್ಚಿದ್ದು, ಬಸ್ ಹಾಗೂ ಲಾರಿ ಚಾಲಕರಿಬ್ಬರಿಗೂ ಗಂಭೀರ ಗಾಯಗಳಾಗಿವೆ.

​ಹಾನಗಲ್‌ನಿಂದ ಮುಂಡಗೋಡದತ್ತ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಮುಂಡಗೋಡಿನಿಂದ ಶಿರಸಿಯತ್ತ ತೆರಳುತ್ತಿದ್ದ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ. ಇಳಿಜಾರಿನ ತಿರುವಿನಲ್ಲಿ ಎರಡೂ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಮತ್ತು ಲಾರಿಯ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

​ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು, ಪೊಲೀಸರು ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ಮುಂಡಗೋಡ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡ ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

​ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಾಹನ ಸಂಚಾರವನ್ನು ಸುಗಮಗೊಳಿಸಿದರು. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.