ಸುದ್ದಿ ಕನ್ನಡ ವಾರ್ತೆ
ಶಿರಸಿ: ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಬಹುಕಾಲದ ಕನಸಾಗಿರುವ ತಾಳಗುಪ್ಪ–ಶಿರಸಿ–ಹುಬ್ಬಳ್ಳಿ ನೂತನ ರೈಲು ಮಾರ್ಗದ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ವೇಳೆ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ತಕ್ಷಣವೇ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಬೇಕು ಎಂದು ಸಚಿವರನ್ನು ಆಗ್ರಹಿಸಿ ರೈಲ್ವೆ ಮಂಡಳಿಯಿಂದ ಯೋಜನೆಗೆ ಶೀಘ್ರ ಅಂತಿಮ ಮಂಜೂರಾತಿ ದೊರಕಿಸಿಕೊಡುವಂತೆ ಮನವಿ ಮಾಡಿದರು.
ತಾಳಗುಪ್ಪ–ಶಿರಸಿ–ಹುಬ್ಬಳ್ಳಿ ರೈಲು ಮಾರ್ಗವು ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ವಾಣಿಜ್ಯ, ಪ್ರವಾಸೋದ್ಯಮ, ಕೈಗಾರಿಕೆ ಮತ್ತು ಸಾರಿಗೆ ಸಂಪರ್ಕಕ್ಕೆ ಹೊಸ ಆಯಾಮ ನೀಡಲಿದ್ದು, ಈ ಭಾಗದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿದೆ ಎಂದು ಕಾಗೇರಿ ಸಚಿವರ ಗಮನಕ್ಕೆ ತಂದರು.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ತಾಳಗುಪ್ಪ–ಶಿರಸಿ–ಹುಬ್ಬಳ್ಳಿ ರೈಲು ಮಾರ್ಗದ ಮಹತ್ವವನ್ನು ಅರಿತಿದ್ದು, ಯೋಜನೆಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
