ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ : ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಕಾರಿಗೆ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ದುರ್ಘಟನೆ ರವಿವಾರ ರಾತ್ರಿ ನಡೆದಿದೆ.
ಮೃತರನ್ನು ಮಹಾರಾಷ್ಟ್ರದ ಪುಣೆ ಮೂಲದ ಮೃಣ್ಮಯಿ ರಾಜನ್ ಕುಲ್ತೆ(32) ಹಾಗೂ ಶರ್ಮಿಳಾ ರಾಜನ್ ಕುಲ್ತೆ(59) ಎಂದು ಗುರುತಿಸಲಾಗಿದೆ.ಅರಬೈಲ್ ಘಟ್ಟದ ಸಮೀಪ
ಕಾರು ಸಂಚರಿಸುತ್ತಿದ್ದ ವೇಳೆ ಹಿಂದಿನಿಂದ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಬಂದ ಕೆಎ-01/ಎಎನ್-1281 ಸಂಖ್ಯೆಯ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಮುಂದಕ್ಕೆ ಚಲಿಸಿ, ಮುಂದೆ ಸಾಗುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣ ಆಂಬುಲೆನ್ಸ್ಗೆ ಮಾಹಿತಿ ನೀಡಿ
ಗಾಯಗೊಂಡ ಚಾಲಕ ಆಲಂಬಾಷಾ ಹಾಗೂ ಇಬ್ಬರು ಪ್ರಯಾಣಿಕರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರು ಪರೀಕ್ಷಿಸಿದ ಬಳಿಕ ಇಬ್ಬರು ಪ್ರಯಾಣಿಕರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಅಪಘಾತಕ್ಕೆ ಕೆಎ-01/ಎಎನ್-1281 ಸಂಖ್ಯೆಯ ಲಾರಿಯ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಕಾರಣ ಎಂದು ಆರೋಪಿಸಿ ಚಾಲಕ ಆಲಂಬಾಷಾ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ನಿರೀಕ್ಷಕ ಸುರೇಶ ಕುಂಬಾರ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.
