ಸುದ್ದಿ ಕನ್ನಡ ವಾರ್ತೆ

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಜನಪ್ರಿಯ ನ್ಯಾಯವಾದಿ ಹಾಗೂ ಕಾಂಗ್ರೆಸ್ ಯುವ ಧುರೀಣ ಜಿ.ಟಿ. ನಾಯ್ಕ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನೇಮಕ ಮಾಡಿ ಆದೇಶ ಹೊರಡಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಸೆಪ್ಟೆಂಬರ್ 9ರಂದು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರು, ಕರ್ನಾಟಕದ ವಿವಿಧ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಪುನರ್ ರಚನೆ ಮಾಡಿದ್ದಾರೆ.‌ ವಿವಿಧ ಜಿಲ್ಲೆಗಳಿಗೆ ನೂತನ ಅಧ್ಯಕ್ಷರ ನೇಮಕಾತಿ ಪ್ರಸ್ತಾವನೆಗೆ ಅನುಮೋದನೆ ನೀಡಿರುವುದಾಗಿ ತಿಳಿಸಿದ್ದಾರೆ. ಈ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬಂದಿವೆ.

ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ಕೈಗೊಳ್ಳಲಾಗಿರುವ ‘ಸಂಘಟನ್ ಸೃಜನ್ ಅಭಿಯಾನ’ದ ಭಾಗವಾಗಿ ಈ ನೇಮಕಾತಿ ಪ್ರಕ್ರಿಯೆ ನಡೆದಿದೆ. ಪ್ರತಿ ಜಿಲ್ಲೆಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಸ್ಥಳೀಯ ಪಕ್ಷದ ಪದಾಧಿಕಾರಿಗಳು, ಹಿರಿಯ ಮುಖಂಡರು, ಯುವ ಜನರು ,ಮಹಿಳಾ ಪದಾಧಿಕಾರಿಗಳು ಹಾಗೂ ವಿವಿಧ ಸಮುದಾಯದ ಮುಖಂಡರ ಜೊತೆ ಸಮಾಲೋಚನೆ ನಡೆಸಿ ಸಂಘಟನೆಯ ಈಗಿನ ಸ್ಥಿತಿ, ಮುಂದಿನ ದಿನಗಳ ಕುರಿತು ಚರ್ಚೆ, ವಿಚಾರ ವಿನಿಮಯ ನಡೆಸಿತ್ತು.

ವೀಕ್ಷಕರು ಸಲ್ಲಿಸಿದ ವರದಿಗಳ ಆಧಾರದ ಮೇಲೆ ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ವೈಯಕ್ತಿಕ ಮಟ್ಟದಲ್ಲಿ ಚರ್ಚೆ ನಡೆಸಿದ ಬಳಿಕ , ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜಿ.ಟಿ. ನಾಯ್ಕ ಅವರ ನೇಮಕ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದ್ದು, ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತವಾಗಿದೆ. ವಕೀಲರಾದ ಜಿ. ಟಿ. ನಾಯ್ಕ ಸಿದ್ದಾಪುರ ತಾಲೂಕಿನವರು. ಕಾರವಾರದಲ್ಲಿ ವಕೀಲ ವೃತ್ತಿಯಲ್ಲಿ ಎರಡು ದಶಕಗಳಿಂದ ಸೇವೆ ಮಾಡಿದ್ದು,ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಬಲ್ಲವರು. ಉತ್ತಮ ವಾಗ್ಮಿ ಹಾಗೂ ಎಲ್ಲರ ಜೊತೆಗೆ ಬೆರೆಯುವ ಗುಣ ಹೊಂದಿದ್ದಾರೆ.