ಸುದ್ದಿ ಕನ್ನಡ ವಾರ್ತೆ
ಜೊಯಿಡಾ :ಗಾಂಧಿ ಜಯಂತಿಯ ಅಂಗವಾಗಿ ಇಂದು ತಾಲೂಕು ಪಂಚಾಯಿತಿ ಜೋಯಿಡಾ ವತಿಯಿಂದ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಲಾರ್ಪಣೆ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಮಹಾತ್ಮ ಗಾಂಧೀಜಿಯವರ ಜೀವನ ಮತ್ತು ಆದರ್ಶಗಳು ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ತದನಂತರ ಸ್ವಚ್ಛತಾ ಹೀ ಸೇವಾ 2026 ಕಾರ್ಯಕ್ರಮದ ಅಂಗವಾಗಿ ತಾಲೂಕು ಪಂಚಾಯಿತಿ ಜೋಯಿಡಾ ವತಿಯಿಂದ ತಾಲೂಕಿನ 16 ಗ್ರಾಮ ಪಂಚಾಯಿತಿಗಳ 33 ಸ್ವಚ್ಛತಾ ಗ್ರಹಿಗಳಿಗೆ ಅಗತ್ಯವಾದ ಸ್ವಚ್ಛತಾ ರಕ್ಷಣಾ ಪರಿಕರಗಳನ್ನು ವಿತರಿಸಲಾಯಿತು. ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಯವರ ಸುರಕ್ಷತೆ ಹಾಗೂ ಆರೋಗ್ಯದ ದೃಷ್ಟಿಯಿಂದ ಈ ಪರಿಕರಗಳನ್ನು ಒದಗಿಸಲಾಯಿತು.
ಈ ಸಂದರ್ಭದಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸ್ವಚ್ಛತಾ ಹೀ ಸೇವಾ 2026 ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವ 16 ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸ್ವಚ್ಛತಾ ಗ್ರಹಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿ, ಸ್ವಚ್ಛತಾ ಕಾರ್ಯವನ್ನು ನಿರಂತರವಾಗಿ ಹಾಗೂ ಸುರಕ್ಷಿತವಾಗಿ ಕೈಗೊಳ್ಳುವಂತೆ ಪ್ರೋತ್ಸಾಹಿಸಿದರು.
ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕರು, ತಾಲೂಕು ಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ಇತರರು ಉಪಸ್ಥಿತರಿದ್ದರು.
