ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ: ಸರ್ಕಾರಿ ಹಾಗೂ ಅರಣ್ಯ ಭೂಮಿಯಲ್ಲಿರುವ ಆಸ್ತಿಗಳಿಗೆ ತೆರಿಗೆ ನಿರ್ಧರಣೆ ಹಾಗೂ ಇ-ಸ್ವತ್ತು 2.0 ತಂತ್ರಾಂಶದಲ್ಲಿ ಆಸ್ತಿಗಳನ್ನು ಕೈಬಿಡುವ ಕುರಿತು ಕಳೆದ ಆಗಸ್ಟ್ 13ರಂದು ಹೊರಡಿಸಲಾಗಿದ್ದ ಸುತ್ತೋಲೆಗೆ ತಡೆ ನೀಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಹಾಗೂ ಅರಣ್ಯ ಭೂಮಿಯಲ್ಲಿರುವ ಆಸ್ತಿಗಳ ತೆರಿಗೆ ಸಂಗ್ರಹಣೆಯನ್ನು ಸ್ಥಗಿತಗೊಳಿಸಿದ್ದರಿಂದ ಸಾರ್ವಜನಿಕರಿಗೆ ಎದುರಾಗುತ್ತಿದ್ದ ಸಮಸ್ಯೆಗಳ ಕುರಿತು ಶಾಸಕ ಶಿವರಾಮ ಹೆಬ್ಬಾರ್ ಹಾಗೂ ಭೀಮಣ್ಣ ನಾಯ್ಕ ಅವರು ಮುಖ್ಯಮಂತ್ರಿಗಳು ಮತ್ತು ಸಂಬಂಧಪಟ್ಟ ಸಚಿವರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಟ್ಟು, ಸುತ್ತೋಲೆಯನ್ನು ಹಿಂಪಡೆಯುವಂತೆ ಮನವಿ ಸಲ್ಲಿಸಿದ್ದರು.
ಶಾಸಕರ ಮನವಿಯನ್ನು ಪರಿಗಣಿಸಿದ ಸಚಿವ ಈಶ್ವರ ಬಿ. ಖಂಡ್ರೆ ಅವರು, ಸರ್ಕಾರಿ ಹಾಗೂ ಅರಣ್ಯ ಭೂಮಿಯಲ್ಲಿರುವ ಆಸ್ತಿಗಳಿಗೆ ತೆರಿಗೆ ಕೈಬಿಡುವ ಕುರಿತು ಹೊರಡಿಸಲಾಗಿದ್ದ ಸುತ್ತೋಲೆಗೆ ತಡೆ ನೀಡುವುದಾಗಿ ತಿಳಿಸಿದ್ದಾರೆ. ಇದರಿಂದ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಎದುರಾಗಿದ್ದ ತೆರಿಗೆ ಹಾಗೂ ಇ-ಸ್ವತ್ತು ಸಂಬಂಧಿತ ಸಮಸ್ಯೆಗಳಿಗೆ ಪರಿಹಾರದ ನಿರೀಕ್ಷೆ ಮೂಡಿದೆ.
