Banner Ad

ಸುದ್ದಿ ಕನ್ನಡ ವಾರ್ತೆ
ಉತ್ತರ ಕನ್ನಡ ಜಿಲ್ಲೆಯ ಜನ ವಿರೋಧಿ ಯೋಜನೆ ಬೇಡ್ತಿ ವರದಾ ನದಿ ಜೋಡಣೆ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನರ ಭಾರಿ ವಿರೋಧವಿದ್ದರೂ ಕೂಡ ಕರ್ನಾಟಕದ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ರವರು ದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಸಿ ಆರ್ ಪಾಟೀಲ್ ರವರನ್ನು ಭೇಟಿಯಾಗಿ ನದಿ ಜೋಡಣೆ ಯೋಜನೆಗೆ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಇದರಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಜನರ ಹಿತಾಸಕ್ತಿ ವಿರುದ್ಧವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಡೆದುಕೊಳ್ಳುತ್ತಿವೆಯೇ ಎಂಬ ಪ್ರಶ್ನೆ ಎದುರಾಗಿದೆ.

ನದಿ ತಿರುವು ಯೋಜನೆ ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸಾಕಷ್ಟು ಹೋರಾಟ ನಡೆಯುತ್ತಲೇ ಇದೆ. ಕಳೆದ ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಭಾರಿ ಪ್ರತಿಭಟನೆ ನಡೆದಿತ್ತು. ನವೆಂಬರ್ 3 ರಂದು ಯಲ್ಲಾಪುರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಇದೀಗ ಜನರ ವಿರೋಧದ ನಡುವೆಯೂ ಕರ್ನಾಟಕದ ಮುಖ್ಯಮಂತ್ರಿಗಳು ಈ ನದಿ ಜೋಡಣೆಗೆ ತಾತ್ವಿಕ ಒಪ್ಪಿಗೆ ನೀಡಿರುವುದು ಜಿಲ್ಲೆಯ ಜನರಿಗೆ ಇನ್ನಷ್ಟು ಬೇಸರದ ಸಂಗತಿಯಾಗಿದೆ.

Banner Ad

ಪ್ರಸಕ್ತ ವರ್ಷ ಉತ್ತರ ಕನ್ನಡ ಜಿಲ್ಲೆಯಲ್ಲಿ ಬರಗಾಲ ಪರಿಸ್ಥಿತಿ ತಲೆದೋರಿದೆ. ಈಗಾಗಲೇ ಯಲ್ಲಾಪುರ, ಶಿರಸಿ, ಅಂಕೋಲಾ, ಮುಂಡಗೋಡ, ಭಟ್ಕಳ ಹಾಗೂ ಹಳಿಯಾಳ ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡದಲ್ಲಿಯೇ ಬರಗಾಲ ಇರುವಾಗ ಇಂದಿನ ನದಿ ನೀರನ್ನು ಬೇರಡೆ ಕೊಂಡೊಯ್ಯುವುದು ಎಷ್ಟು ಸರಿ. ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಈ ನದಿಗಳ ಒಳಹರಿವು ಈಗಾಗಲೇ ಭಾರಿ ಪ್ರಮಾಣದಲ್ಲಿ ಕಡಿಮೆ ಇದೆ. ಹೀಗಿರುವಾಗ ಇಂತಹ ಬೃಹತ್ ಯೋಜನೆ ಜಾರಿಯಾದರೆ ಉತ್ತರ ಕನ್ನಡ ಜಿಲ್ಲೆ ಸಂಪೂರ್ಣ ಬತ್ತಿ ಹೋಗುವ ಭೀತಿ ಎದುರಾಗಿದೆ.

Banner Ad