ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ: ಅವೈಜ್ಞಾನಿಕ ನದಿ ತಿರುವು ಯೋಜನೆ ವಿರೋಧಿಸಿ ಕಳೆದ ಒಂದುವರೆ ವರ್ಷದಿಂದ ಸೋಂದಾ ಸ್ವರ್ಣವಲ್ಲಿ ಶ್ರೀಗಳ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದ್ದರು ಸರ್ಕಾರ ಈ ಹೋರಾಟಕ್ಕೆ ಸ್ಪಂದಿಸದ ಕಾರಣ ನವೆಂಬರ್ 3ರಂದು ಯಲ್ಲಾಪುರದಲ್ಲಿ ರಸ್ತೆ ತಡೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೋರಾಟ ಸಮಿತಿ ಪ್ರಧಾನ ಸಂಚಾಲಕ ಹರಿಪ್ರಕಾಶ್ ಕೋಣೆಮನೆ ಹೇಳಿದ್ದಾರೆ.
ಬುಧವಾರ ಯಲ್ಲಾಪುರ ದ ಅಡಿಕೆ ಭವನದಲ್ಲಿ ಆಯೋಜಿಸಿದ್ದ ರಸ್ತೆ ತಡೆ ಚಳುವಳಿಯ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಸ್ವರ್ಣವಲ್ಲಿ ಶ್ರೀಗಳ ಮಾರ್ಗದರ್ಶನದಲ್ಲೇ ಈ ಹೋರಾಟ ನಡೆಯುತ್ತಿದ್ದು, ಅಂಕೋಲಾ, ಜೊಯಿಡಾ, ಕುಮಟಾ, ಶಿರಸಿ, ಸಿದ್ದಾಪುರ, ದಾಂಡೇಲಿ, ಮುಂಡಗೋಡು ಹೀಗೆ ವಿವಿಧ ಭಾಗಗಳಿಂದ ಸುಮಾರು ಎಂಟು ಸಾವಿರಕ್ಕೂ ಹೆಚ್ಚು ಜನರು, ಕಾಲೇಜು ವಿದ್ಯಾರ್ಥಿಗಳು ಈ ಬೃಹತ್ ಹೋರಾಟದಲ್ಲಿ ಪಾಲ್ಗೊಳ್ಳುವ ನೀರಿಕ್ಷೆ ಇದೆ. ಇಷ್ಟೇ ಅಲ್ಲದೆ ಯಲ್ಲಾಪುರದ ಪ್ರತಿ ಪಂಚಾಯತಿಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಲಿದ್ದಾರೆ. ಅಂದು ಹೋರಾಟದಲ್ಲಿ ಒಟ್ಟಾರೆ ಸುಮಾರು 20 ಸಾವಿರಕ್ಕೂ ಅಧಿಕ ಜನರು ಸೇರುವ ಸಾಧ್ಯತೆ ಇದೆ. ಯಲ್ಲಾಪುರ ಪಟ್ಟಣದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳು, ಹೋಟೆಲ್ ಗಳು ಹಾಗೂ ಔಷದ ಅಂಗಡಿಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಹೋರಾಟಕ್ಕೆ ಬೆಂಬಲಿ ನೀಡಲು ವ್ಯಾಪಾರಸ್ಥರು ಮುಂದಾಗಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲ್ಭಾಗದಲ್ಲಿ ನೀರಿನ ಕೊರತೆ ಎದುರಾಗುತ್ತಿರುವ ಈ ಸಂದರ್ಭದಲ್ಲಿ ಅಘನಾಶಿನಿ, ವರದಾ, ಬೆಡ್ತಿ ನದಿಗಳ ನೀರನ್ನು ಹಾವೇರಿ -ಗದಗ ಜಿಲ್ಲೆಗಳಿಗೆ ಈ ನೀರನ್ನು ಕೊಂಡೊಯ್ಯಲು ಸರ್ಕಾರವು ಯೋಜನೆ ರೂಪಿಸಿರುವುದು ಅವೈಜ್ಞಾನಿಕವಾಗಿದೆ ಎಂದು ಹರಿಪ್ರಕಾಶ್ ಕೋಣೆಮನೆ ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗೋಪಾಲಕೃಷ್ಣ ಭಟ್ ಹಂಡ್ರಮನೆ ಮಾತನಾಡಿ-ಹೋರಾಟದ ಸಂದರ್ಭದಲ್ಲಿ ಪ್ರತಿಯೊಬ್ಬರು ತಾಳ್ಮೆಯಿಂದ ಇದ್ದು ಹಿರಿಯರ ಮಾರ್ಗದರ್ಶನ ಮತ್ತು ಸೂಚನೆಗಳನ್ನು ಪಾಲಿಸಬೇಕು, ಅಹಿತಕರ ಘಟನೆ ನಡೆದರೆ ಹೋರಾಟಕ್ಕೆ ಮಾರ್ಗದರ್ಶನ ನೀಡುತ್ತಿರುವ ನಮ್ಮ ಶ್ರೀಗಳಿಗೂ ಕೆಟ್ಟ ಹೆಸರು ಬರುತ್ತದೆ ಎಂದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಕಲ್ಪ ಸೇವಾ ಸಂಸ್ಥೆಯ ಅಧ್ಯಕ್ಷ ಪ್ರಮೋದ್ ಹೆಗಡೆ ಮಾತನಾಡಿ-ನವೆಂಬರ್ ಮೂರರಂದು ನಡೆಯುವ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ ಇದೆ. ಇದರಿಂದಾಗಿ ನಾಲ್ಕೈದು ಆಂಬುಲೆನ್ಸ್ ಗಳು, ಸಂಚಾರಿ ಶೌಚಾಲಯಗಳು ಹಾಗೂ ಅಗತ್ಯ ವೈದ್ಯಕೀಯ ವ್ಯವಸ್ಥೆ ಕಲ್ಪಿಸಬೇಕು ಎಂದರು.
ಈ ಸಂದರ್ಭದಲ್ಲಿ ನಾಗರೀಕ ವೇದಿಕೆ ಅಧ್ಯಕ್ಷ ರಾಮು ನಾಯಕ್ ಮಾತನಾಡಿ ಅಗತ್ಯ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಹೋರಾಟ ಸಸಂಚಾಲಕರು, ಮತ್ತಿತರರು ಉಪಸ್ಥಿತರಿದ್ದು ಮಾತನಾಡಿದರು.
