ಸುದ್ದಿ ಕನ್ನಡ ವಾರ್ತೆ

ಶಿರಸಿ ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರಗಾಲದಿಂದಾಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ನಡುವೆ 2025-26ನೇ ಸಾಲಿನ ಬೆಳೆ ವಿಮೆ ಹಣ ಜಮೆಯಾಗದ ಹಿನ್ನೆಲೆಯಲ್ಲಿ ಇಂದು ರೈತರು ಮುಂಡಗೋಡಿನ ಪಾಳ ಕ್ರಾಸ್‌ನಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ.ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

 

ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ನಿಯಮಾವಳಿ ಪ್ರಕಾರ ಸೆಪ್ಟೆಂಬರ್ ಅಂತ್ಯದೊಳಗೇ ರೈತರಿಗೆ ತಲುಪಬೇಕಾಗಿದ್ದ ಬೆಳೆ ವಿಮೆ ಪರಿಹಾರ ಮೊತ್ತವನ್ನು ಇದುವರೆಗೂ ಬಿಡುಗಡೆ ಮಾಡದೆ ನಾನಾ ಸಬೂಬುಗಳನ್ನು ಹೇಳುತ್ತಿರುವುದು ತೀವ್ರ ಖಂಡನೀಯ.

​ಕಳೆದ ಎರಡು ವರ್ಷಗಳಿಂದಲೂ ಅನ್ನದಾತರು ರಸ್ತೆಗಿಳಿದು ಹೋರಾಟ ನಡೆಸಿಯೇ ತಮ್ಮ ನ್ಯಾಯಯುತ ವಿಮೆ ಪರಿಹಾರ ಪಡೆಯಬೇಕಾದ ದುಸ್ಥಿತಿ ನಿರ್ಮಾಣವಾಗಿರುವುದು ದುರದೃಷ್ಟಕರ. ಪ್ರಸ್ತುತ ಸಾಲದ ಸುಳಿಗೆ ಸಿಲುಕಿರುವ ಭತ್ತ, ಅಡಿಕೆ ಮತ್ತು ಮಾವು ಬೆಳೆಗಾರರ ಸ್ಥಿತಿ ಅತ್ಯಂತ ಶೋಚನೀಯವಾಗಿದ್ದು, ಯಾವುದೇ ತಾಂತ್ರಿಕ ನೆಪಗಳನ್ನು ಮುಂದಿಡದೆ ಅರ್ಹ ರೈತರೆಲ್ಲರಿಗೂ ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರದ ಹಣವನ್ನು ತಕ್ಷಣವೇ ಅವರ ಖಾತೆಗಳಿಗೆ ಜಮೆ ಮಾಡಬೇಕು.
​ಬೆಳೆ ವಿಮೆ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಈಗಾಗಲೇ ಸೂಚನೆ ನೀಡಿದ್ದರೂ ಇಲಾಖಾ ಮಟ್ಟದಲ್ಲಿ ಆಗುತ್ತಿರುವ ಅನಗತ್ಯ ವಿಳಂಬವೇ ರೈತರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆದ್ದರಿಂದ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗಳು ತಕ್ಷಣವೇ ಎಚ್ಚೆತ್ತುಕೊಂಡು ಬಾಕಿ ಇರುವ ಪರಿಹಾರ ಹಣವನ್ನು ಬಿಡುಗಡೆ ಮಾಡಲು ತಕ್ಷಣ ಕ್ರಮ ಕೈಗೊಳ್ಳಬೇಕು.

​ಅನ್ನದಾತನ ತಾಳ್ಮೆಯನ್ನು ಇನ್ನಷ್ಟು ಪರೀಕ್ಷಿಸದೆ, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಬೇಕೆಂದು ಬಲವಾಗಿ ಒತ್ತಾಯಿಸುತ್ತೇನೆ.
ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ,ಹೇಳಿದ್ದಾರೆ