ಸುದ್ದಿ ಕನ್ನಡ ವಾರ್ತೆ

ಕಾರವಾರ:ನಗರದ ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಗುಣಮಟ್ಟವಿಲ್ಲದ ಆಹಾರ ಪೂರೈಕೆಯ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ.

ವಸತಿ ನಿಲಯದ ವಿದ್ಯಾರ್ಥಿನಿಯರು ರಾತ್ರಿ ಊಟದ ಸಮಯದಲ್ಲಿ ಮೂಲಭೂತ ಸೌಕರ್ಯ ಹಾಗೂ ಉತ್ತಮ ಗುಣಮಟ್ಟದ ಆಹಾರ ಪೂರೈಕೆ ಮಾಡುವಂತೆ ವಾರ್ಡನರವರ ಗಮನಕ್ಕೆ ತಂದರು ಹಾಗೂ ಶೌಚಾಲಯಗಳ ಅವ್ಯವಸ್ಥೆಗಳ ಬಗ್ಗೆ ದೂರು ನೀಡಿದರೂ,ನಾವೇ ಸರಿಪಡಿಸಿಕೊಳ್ಳುವಂತೆ ಒತ್ತಡ ಹೇರುವುದು,ತಾರತಮ್ಯ ನೀತಿ ವಾರ್ಡನರ ನಿರ್ಲಕ್ಷ್ಯದ ವಿರುದ್ಧ ಹಠಾತ್ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ಮಾಹಿತಿ ಹಿನ್ನೆಲೆಯಲ್ಲಿ ತಹಶೀಲ್ದಾರ್ ಎನ್. ಎಫ್. ನರೋಹ್ನಾ ವಸತಿ ನಿಲಯಕ್ಕೆ ಆಗಮಿಸಿ ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಆಲಿಸಿ,ಕೊರತೆಗಳ ಗಂಭೀರತೆಯನ್ನು ಮನಗೊಂಡು ವಿದ್ಯಾರ್ಥಿನಿಯರಿಗೆ ಯಾವುದೇ ಸಮಸ್ಯೆ ಆಗದಂತೆ,ಮೂಲಭೂತ ಸೌಕರ್ಯಗಳನ್ನು ಕೂಡಲೇ ಒದಗಿಸುವ ಭರವಸೆಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳು,ಕಂದಾಯ ಇಲಾಖೆಯ ಅಧಿಕಾರಿಗಳು,ಸ್ಥಳೀಯ ಸಾರ್ವಜನಿಕರು ಇದ್ದರು.