ಸುದ್ದಿ ಕನ್ನಡ ವಾರ್ತೆ
ಕುಮಟಾ: ತಾಲೂಕಿನ ಪ್ರವಾಸಿ ತಾಣ ಯಾಣಕ್ಕೆ ತೆರಳುತ್ತಿದ್ದ ದಾವಣಗೆರೆಯ ಕಾಲೇಜು ವಿದ್ಯಾರ್ಥಿಗಳಿದ್ದ ಬಸ್‌, ತಾಲೂಕಿನ ಹಸೆಮನೆ ನುಜ್ಜಗಿ ಕ್ರಾಸ್‌ನ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 12 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.

ದಾವಣಗೆರೆಯ ಜೈನ್ ಪಿಯು ಕಾಲೇಜಿನಿಂದ ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ಈ ಬಸ್‌ನಲ್ಲಿ ಒಟ್ಟು 50 ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಯಾಣಿಸುತ್ತಿದ್ದರು. ಮಂಗಳವಾರ ಬೆಳಿಗ್ಗೆ ಶಿರಸಿಯ ಮಾರಿಕಾಂಬಾ ದೇವಸ್ಥಾನದ ದರ್ಶನ ಪಡೆದು ಯಾಣದತ್ತ ತೆರಳುತ್ತಿದ್ದಾಗ, ಹಸೆಮನೆ ನುಜ್ಜಗಿ ಕ್ರಾಸ್‌ನ ಕಡಿದಾದ ತಿರುವಿನಲ್ಲಿ ಈ ಅವಘಡ ಸಂಭವಿಸಿದೆ.
ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಗೆ ಉರುಳಿದೆ. ಘಟನೆಯ ತೀವ್ರತೆಗೆ ಬಸ್‌ನಲ್ಲಿದ್ದ 12 ವಿದ್ಯಾರ್ಥಿಗಳಿಗೆ ಹೆಚ್ಚಿನ ಗಾಯಗಳಾಗಿದ್ದು, ಉಳಿದ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಚೀರಾಟ ಕೇಳಿ ಸ್ಥಳೀಯರು ಹಾಗೂ ದಾರಿಹೋಕರು ರಕ್ಷಣೆಗೆ ಧಾವಿಸಿದ್ದು, ಗಾಯಾಳುಗಳನ್ನು ಬಸ್‌ನಿಂದ ಹೊರತೆಗೆದು ತಕ್ಷಣವೇ ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ. ಹೆಚ್ಚಿನ ಗಾಯಗೊಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರೆದಿದೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರವಾಸದ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗಳ ತಂಡದಲ್ಲಿ ಈ ಆಕಸ್ಮಿಕ ಘಟನೆಯಿಂದಾಗಿ ಆತಂಕ ಮನೆಮಾಡಿದೆ.