Banner Ad

ಸುದ್ದಿ ಕನ್ನಡ ವಾರ್ತೆ

ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೊಳಿಸದಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ ಭಾರೀ ಪ್ರತಿಭಟನೆ ನಡೆಯಿತು.

Banner Ad

ಗುರುವಾರ ರಾಜ್ಯ ಸರ್ಕಾರದ ವಿರುದ್ಧ ಶರಾವತಿ ಪಂಪ್ಡ್ ಸ್ಟೋರೇಜ್ ವಿರೋಧಿ ಹೋರಾಟಗಾರರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದರು. ಗೋಪಿವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ನಡೆದ ಪ್ರತಿಭಟನಾ ಜಾಥಾದಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿ ಯೋಜನೆ ಕೈಬಿಡುವಂತೆ ಒತ್ತಾಯಿಸಿದರು. ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ನೇತೃತ್ವದ ರಾಷ್ಟ್ರಭಕ್ತರ ಬಳಗ ಹಾಗೂ “ಪರಿಸರಕ್ಕಾಗಿ ನಾವು” ಸಮಿತಿಯ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಹೋರಾಟಕ್ಕೆ ಬೆಂಬಲ ನೀಡಿದರು.ರಾಜ್ಯ ಸರ್ಕಾರವು ಸುಮಾರು 10,500 ಕೋಟಿ ರೂಪಾಯಿ ವೆಚ್ಚದಲ್ಲಿ 2,000 ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ಉದ್ದೇಶದಿಂದ ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಆದರೆ ಈ ಯೋಜನೆಯಿಂದ ಸುಮಾರು 17 ಸಾವಿರ ಮರಗಳು ನಾಶವಾಗಲಿದ್ದು, ಪಶ್ಚಿಮಘಟ್ಟಗಳ ಪರಿಸರ ಸಮತೋಲನಕ್ಕೆ ಗಂಭೀರ ಧಕ್ಕೆಯಾಗಲಿದೆ ಎಂದು ಹೋರಾಟಗಾರರು ಆರೋಪಿಸಿದರು.

ಯೋಜನೆಯ ಪರಿಣಾಮವಾಗಿ ಶರಾವತಿ ಕಣಿವೆಯಲ್ಲಿನ ಸಿಂಗಳೀಕ ಹಾಗೂ ಇಂಡಿಯನ್ ಗ್ರೇಟ್ ಹಾರ್ನ್ ಬಿಲ್ ಆವಾಸಸ್ಥಾನ ಹಾನಿಗೊಳಗಾಗುವ ಸಾಧ್ಯತೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಲೆನಾಡಿನ ಶಿವಮೊಗ್ಗ ಉತ್ತರ ಕನ್ನಡ ಜಿಲ್ಲೆಗಳಿಗೆ ಈ ಯೋಜನೆ ಮಾರಕವಾಗಬಹುದು ಎಂದು ಅವರು ಎಚ್ಚರಿಸಿದರು. ಪರಿಸರ ನಾಶಕ್ಕೆ ಕಾರಣವಾಗುವ ಯೋಜನೆಯನ್ನು ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಯೋಜನೆ ಹಿಂತೆಗೆದುಕೊಳ್ಳುವವರೆಗೆ ನಿರಂತರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.ಪಶ್ಚಿಮಘಟ್ಟಗಳ ಸಂರಕ್ಷಣೆಗಾಗಿ ಮಲೆನಾಡಿಗರಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

Banner Ad